ಸಾರಾಂಶ
ಉನ್ನತ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ವಿಚಾರದಲ್ಲಿ ರಾಜ್ಯ ಸರ್ಕಾರಗಳ ಅಧಿಕಾರ ಮೊಟಕುಗೊಳಿಸುವ ಯುಜಿಸಿಯ ಹೊಸ ಕರಡು ನಿಯಮಾವಳಿಗಳ ಕುರಿತು ಚರ್ಚೆಗೆ ಫೆ.5ರಂದು ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಸಮಾವೇಶ
ಬೆಂಗಳೂರು : ಉನ್ನತ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ವಿಚಾರದಲ್ಲಿ ರಾಜ್ಯ ಸರ್ಕಾರಗಳ ಅಧಿಕಾರ ಮೊಟಕುಗೊಳಿಸುವ ಯುಜಿಸಿಯ ಹೊಸ ಕರಡು ನಿಯಮಾವಳಿಗಳ ಕುರಿತು ಚರ್ಚೆಗೆ ಫೆ.5ರಂದು ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಸಮಾವೇಶದಲ್ಲಿ ಏಳು ರಾಜ್ಯಗಳ ಸಚಿವರು ಭಾಗವಹಿಸಲಿದ್ದಾರೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.
ಚುನಾವಣೆ ಇರುವುದರಿಂದ ದೆಹಲಿಯ ಉನ್ನತ ಶಿಕ್ಷಣ ಸಚಿವರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿಲ್ಲ. ಉಳಿದಂತೆ ಕರ್ನಾಟಕವೂ ಸೇರಿದಂತೆ ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಜಾರ್ಖಂಡ್, ತೆಲಂಗಾಣ, ತಮಿಳುನಾಡು ಹಾಗೂ ಕೇರಳದ ಉನ್ನತ ಶಿಕ್ಷಣ ಸಚಿವರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಫೆಬ್ರವರಿ 5ರ ಬೆಳಗ್ಗೆ 10:30ಕ್ಕೆ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುಜಿಸಿ ಕರಡು ನಿಯಮಾವಳಿ ವಿಶ್ವವಿದ್ಯಾಲಯಗಳಲ್ಲಿ ಕುಲಪತಿಗಳ ನೇಮಕ, ಬೋಧಕ ವರ್ಗದ ನೇಮಕಾತಿ ಸೇರಿದಂತೆ ಅನೇಕ ವಿಚಾರದಲ್ಲಿ ರಾಜ್ಯ ಸರ್ಕಾರಗಳ ಅಧಿಕಾರ ಮೊಟಕುಗೊಳಿಸಲಿದೆ. ರಾಜ್ಯ ಸರ್ಕಾರಗಳ ಸಂವಿಧಾನಾತ್ಮಕ ಕರ್ತವ್ಯ ಮತ್ತು ಜವಾಬ್ದಾರಿಯನ್ನು ನಿಗ್ರಹಿಸಲು ಹೊರಟಿರುವುದು ಒಕ್ಕೂಟ ವ್ಯವಸ್ಥೆಯಲ್ಲಿ ಸರಿಯಲ್ಲ. ಈ ಬಗ್ಗೆ ಈಗಾಗಲೇ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳು ತಮ್ಮ ವಿರೋಧ, ಅತೃಪ್ತಿ ವ್ಯಕ್ತಪಡಿಸಿವೆ. ಆದರೆ, ಕೆಲವು ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಎನ್.ಡಿ.ಎ ಜೊತೆ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಬಹಿರಂಗವಾಗಿ ತಮ್ಮ ವಿರೋಧ ವ್ಯಕ್ತಪಡಿಸಲಾರದಂತ ಸ್ಥಿತಿಯಲ್ಲಿವೆ. ಎನ್‌ಡಿಎ ಮೈತ್ರಿಕೂಟದಲ್ಲಿರುವ ಜೆಡಿಯು, ಟಿಡಿಪಿ ಹಾಗೂ ಎಲ್ಜೆಪಿ (ರಾಮ್ ವಿಲಾಸ್) ಪಕ್ಷಗಳು ಈಗಾಗಲೇ ಈ ಸಂಬಂಧ ಅತೃಪ್ತಿ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿರುವುದು ಬಹಿರಂಗವಾಗಿದೆ. ಸಮಾವೇಶದಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರದ ಧೋರಣೆಯ ಬಗ್ಗೆ ಸಮಗ್ರವಾಗಿ ಚರ್ಚಿಸಲಾಗುವುದು. ಅಭಿಪ್ರಾಯ ಕ್ರೋಢೀಕರಿಸಿ ಸಮಾವೇಶದ ನಿರ್ಣಯಗಳನ್ನು ಕೇಂದ್ರ ಸರ್ಕಾರ ಹಾಗೂ ಯುಜಿಸಿಗೆ ಕಳುಹಿಸಿ ಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.