ಸಾರಾಂಶ
ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತ ಹಾಗೂ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪರಿಣಾಮ ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತ ಹಾಗೂ ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪರಿಣಾಮ ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಆ ಹಿನ್ನೆಲೆಯಲ್ಲಿ 10ಕ್ಕೂ ಹೆಚ್ಚಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡು ಪ್ರದೇಶದ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗ ಹಾಗೂ ಕರಾವಳಿ ಪ್ರದೇಶದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅ. 17ರವರೆಗೆ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಮೋಡಕವಿದ ವಾತಾವರಣ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ಹಿಂಗಾರು ಮಳೆಯ ಜತೆಗೆ ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತ ಹಾಗೂ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯ ಪರಿಣಾಮ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿ ಅ. 17ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ. ಹೀಗಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶದಲ್ಲಿನ ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅ. 18ರ ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಮುಂದಿನ ದಿನಗಳಲ್ಲಿ ಮಳೆ ಮುಂದುವರಿಯಲಿದೆ.