ಸಾರಾಂಶ
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 10 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 10 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡು ಹಾಗೂ ಶ್ರೀಲಂಕಾ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದ ತಮಿಳುನಾಡಿನಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬುಧವಾರವೇ ಮೋಡ ಕವಿದ ವಾತಾವರಣ ಕಂಡು ಬಂದಿದೆ.
ಗುರುವಾರ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.
ಶುಕ್ರವಾರವೂ ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ತಿಳಿಸಿದೆ.
16ಕ್ಕೆ ಮತ್ತೆ ವಾಯುಭಾರ ಕುಸಿತ: ಇದರ ಬೆನ್ನಲ್ಲೇ ಡಿ.16ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಒಂದೆರಡು ದಿನದಲ್ಲಿ ವಾಯುಭಾರ ಕುಸಿತದ ತೀವ್ರತೆ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ. ಡಿ.17-18ಕ್ಕೆ ರಾಜ್ಯದ ದಕ್ಷಿಣ ಒಳನಾಡು ಸೇರಿ ವಿವಿಧ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಶ್ರೀನಿವಾಸ್ ರೆಡ್ಡಿ ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದ್ದಾರೆ.