ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ಸಾಧ್ಯತೆ

| N/A | Published : Jul 29 2025, 08:04 AM IST

BBMP latest news today photo

ಸಾರಾಂಶ

ಗ್ರೇಟರ್‌ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ಐದು ನಗರಪಾಲಿಕೆಗಳನ್ನು ರಚಿಸಿ ಗಡಿ ಗುರುತಿಸಿರುವ ರಾಜ್ಯ ಸರ್ಕಾರ, ಡಿಸೆಂಬರ್‌ನಲ್ಲಿ ಚುನಾವಣೆ ನಡೆಸಲು ಸಿದ್ಧವಿರುವುದಾಗಿ ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

 ನವದೆಹಲಿ :  ಗ್ರೇಟರ್‌ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ಐದು ನಗರಪಾಲಿಕೆಗಳನ್ನು ರಚಿಸಿ ಗಡಿ ಗುರುತಿಸಿರುವ ರಾಜ್ಯ ಸರ್ಕಾರ, ಡಿಸೆಂಬರ್‌ನಲ್ಲಿ ಚುನಾವಣೆ ನಡೆಸಲು ಸಿದ್ಧವಿರುವುದಾಗಿ ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಪರವಾಗಿ ವಕೀಲ ಡಿ.ಎಲ್‌.ಚಿದಾನಂದ ಅವರು ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಜೋಯ್‌ಮಾಲ್ಯ ಬಾಗ್ಚಿ ಅವರಿರುವ ಪೀಠ ನಡೆಸಲಿದೆ.

ಈ ಸಂಬಂಧ ಮಾಜಿ ಸದಸ್ಯ ಶಿವರಾಜ್‌ ಮತ್ತು ಇತರರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ ಮುಕುಲ್ ರೋಹಟಗಿ, ಬಿಬಿಎಂಪಿಗೆ ಚುನಾವಣೆ ನಡೆಯದೆ ಐದು ವರ್ಷ ಕಳೆದಿದೆ. 2015ರಲ್ಲಿ ಬಿಬಿಎಂಪಿಗೆ ಚುನಾವಣೆ ನಡೆದಿತ್ತು. ನಾನಾ ಕಾರಣ ನೀಡಿ ಚುನಾವಣೆಯನ್ನು ಮುಂದಕ್ಕೆ ಹಾಕಲಾಗುತ್ತಿದೆ ಎಂದು ವಾದಿಸಿದರು.

ಸರ್ಕಾರದ ಪರ ವಾದ ಮಂಡಿಸಿದ ವಕೀಲ ಸಿಂಘ್ವಿ, ಚುನಾವಣೆ ತಡವಾಗಿದೆ, ಇದರಲ್ಲಿ ಎರಡು ಮಾತಿಲ್ಲ. ಆದರೆ, ಬಿಬಿಎಂಪಿಯನ್ನು ವಿಂಗಡಣೆ ಮಾಡಲಾಗಿದೆ.

ಬಿಬಿಎಂಪಿಯನ್ನು ಐದು ಪಾಲಿಕೆಗಳನ್ನಾಗಿ ವಿಭಜಿಸಿ ಜುಲೈ 19ರಂದು ಅಧಿಸೂಚನೆ ಹೊರಡಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಲಾಗಿದೆ. ಇದಕ್ಕೆ ಆಗಸ್ಟ್ 18ರವರೆಗೆ ಅವಕಾಶವಿದೆ. ಆಕ್ಷೇಪಣೆಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲು ರಾಜ್ಯ ಸರ್ಕಾರಕ್ಕೆ 15 ದಿನಗಳ ಕಾಲಾವಕಾಶ ಬೇಕು. ಐದು ಪಾಲಿಕೆಗಳಿಗೆ ಹೊಸ ವಾರ್ಡ್‌ಗಳ ರಚನೆ ಮಾಡಬೇಕಿದೆ. ವಾರ್ಡ್‌ಗಳ ಗಡಿಯ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆ ಸ್ವೀಕರಿಸಬೇಕಿದೆ. ನಂತರ ಅಂತಿಮ ಅಧಿಸೂಚನೆ ಹೊರಡಿಸಬೇಕು. ನವೆಂಬರ್ 1ರ ಹೊತ್ತಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಈತನಕ ಆಗಿರುವ ಬೆಳವಣಿಗೆಗಳ ಬಗ್ಗೆ ವಿವರವಾದ ಅಫಿಡವಿಟ್ ಸಲ್ಲಿಸಲು ರಾಜ್ಯಕ್ಕೆ ಸೂಚನೆ ನೀಡಿತು. ಬಳಿಕ, ಮುಂದಿನ ಸೋಮವಾರಕ್ಕೆ ವಿಚಾರಣೆ ಮುಂದೂಡಿತು.

ಹೈಕೋರ್ಟ್‌ ಸಿಂಧುತ್ವ ಪ್ರಶ್ನಿಸಿ ಮೇಲ್ಮನವಿ:

ಬಿಬಿಎಂಪಿ ಸದಸ್ಯರ ಅಧಿಕಾರಾವಧಿ 2019ರ ಸೆಪ್ಟೆಂಬರ್‌ 10ರಂದು ಪೂರ್ಣಗೊಂಡಿತ್ತು. ಈ ಸಂಬಂಧದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, 6 ವಾರಗಳಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶಿಸಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಸುಪ್ರೀಂ ಕೋರ್ಟ್‌ 2020ರ ಡಿಸೆಂಬರ್‌ 18ರಂದು ಅಮಾನತ್ತಿನಲ್ಲಿ ಇರಿಸಿತ್ತು. ಕರ್ನಾಟಕ ಮುನ್ಸಿಪಲ್‌ ಕಾರ್ಪೋರೇಷನ್‌ (ತಿದ್ದುಪಡಿ) ಕಾಯ್ದೆ-2020ರ ಅನ್ವಯ ರಚಿಸಲಾಗುವ 243 ವಾರ್ಡ್‌ಗಳ ಬದಲಿಗೆ, ಮೊದಲಿದ್ದ 198 ವಾರ್ಡ್‌ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್‌ ನೀಡಿದ್ದ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

Read more Articles on