ನಗರದ ವಿವಿಧೆಡೆ ನಡೆಯುವ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆ, ‘ಹೀಟ್ ಮ್ಯಾಪ್‘ ಮೂಲಕ ಜನದಟ್ಟಣೆ ಪತ್ತೆ, ಸಿಸಿ ಕ್ಯಾಮೆರಾ ಅಳವಡಿಕೆ ಸೇರಿದಂತೆ ವಿವಿಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.
ಬೆಂಗಳೂರು : ನಗರದ ವಿವಿಧೆಡೆ ನಡೆಯುವ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆ, ‘ಹೀಟ್ ಮ್ಯಾಪ್‘ ಮೂಲಕ ಜನದಟ್ಟಣೆ ಪತ್ತೆ, ಸಿಸಿ ಕ್ಯಾಮೆರಾ ಅಳವಡಿಕೆ ಸೇರಿದಂತೆ ವಿವಿಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.
ಭದ್ರತಾ ಕ್ರಮಗಳ ಕುರಿತು ಭಾನುವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹೊಸ ಸಂಭ್ರಮಾಚರಣೆಯ ದಿನದಂದು ಕಾನೂನು ಸುವ್ಯವಸ್ಥೆ 14 ಸಾವಿರ ಪೊಲೀಸರು, 2500 ಟ್ರಾಫಿಕ್ ಪೊಲೀಸರು, 88 ಕೆಎಸ್ಆರ್‌ಪಿ ತುಕಡಿ , 21 ಸಿಎಆರ್, 266 ಹೊಯ್ಸಳ ವಾಹನ, 250 ಕೋಬ್ರಾ ವಾಹನಗಳನ್ನು ನಿಯೋಜಿಸಲಾಗುತ್ತಿದೆ. 400 ಟ್ರಾಫಿಕ್ ವಾರ್ಡನ್‌ಗಳನ್ನು ನಿಯೋಜಿಸಲಾಗಿದೆ. ಜನ ದಟ್ಟಣೆ ನಿಯಂತ್ರಿಸಲು ವಾಟರ್ ಜೆಟ್ಸ್ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಸಿವಿಲ್ ಡಿಫೆನ್ಸ್, ಹೋಮ್ ಗಾರ್ಡ್ಸ್ ಸೇರಿದಂತೆ ಒಟ್ಟು 20 ಸಾವಿರ ಪೊಲೀಸರನ್ನು ನಿಯೋಜಿಸಲಾಗುವುದು ಎಂದರು.
10 ಲಕ್ಷಕ್ಕೂ ಹೆಚ್ಚು ಜನರು ಭಾಗಿ:
ಕಳೆದ ವರ್ಷ 8 ಲಕ್ಷಕ್ಕೂ ಹೆಚ್ಚು ಜನರು ಸಂಭ್ರಮಾಚರಣೆಗಳಲ್ಲಿ ಭಾಗವಹಿಸಿದ್ದರು. ಎಂ.ಜಿ. ರಸ್ತೆ, ಬ್ರಿಗೇಡ್ ರೋಡ್, ಇಂದಿರಾನಗರ, ಕೋರಮಂಗಲ, ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯನ್ನು ಹೆಚ್ಚು ಜನ ಸೇರುವ ಸ್ಥಳಗಳೆಂದು ಗುರುತಿಸಲಾಗಿದೆ. ಈ ವರ್ಷ ಸುಮಾರು 10 ಲಕ್ಷಕ್ಕು ಹೆಚ್ಚು ಜನ ಸೇರುವ ಸಾಧ್ಯತೆ ಇದೆ ಎಂದರು.
8 ಕಡೆ ಸಾರಿಗೆ ವ್ಯವಸ್ಥೆ:
ಜನರು ಸುರಕ್ಷಿತವಾಗಿ ಮನೆಗಳಿಗೆ ಹೋಗಲು ಅನುವು ಮಾಡಿ ಕೊಡಲಾಗುವುದು. ಹೆಚ್ಚು ಯುವಜನರು ಸೇರುವ ಬಾರ್ ಆ್ಯಂಡ್ ರೆಸ್ಟೋರೆಂಟ್, ಮೆಟ್ರೋ ಕಾರಿಡಾರ್, ಮನೋರಂಜನಾ ಸ್ಥಳಗಳಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅವಶ್ಯಕತೆ ಇರುವ ಸ್ಥಳಗಳಲ್ಲಿ ವಾಚ್ ಟವರ್, 180 ಕಡೆ ಫೋಕಸ್ ಲೈಟ್‌ಗಳನ್ನು ಅಳವಡಿಸಲಾಗುವುದು. ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲು ಪೊಲೀಸ್ ಆ್ಯಕ್ಸಿಸ್ ಕಂಟ್ರೋಲ್, ವಾಹನ ತಪಾಸಣೆ ವ್ಯವಸ್ಥೆ ಮಾಡಲಾಗಿದೆ. ಟ್ಯಾಕ್ಸಿಗಳು ಸಿಗುವುದಿಲ್ಲ. ಅಂತವರು ಸುರಕ್ಷಿತವಾಗಿ ಮನೆಗಳಿಗೆ ಹೋಗಲು ಎಂಟು ಕಡೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
250 ಕ್ಕೂ ಸಿಸಿ ಕ್ಯಾಮೆರಾ ಅಳವಡಿಕೆ:
ಸಂಭ್ರಮಾಚರಣೆ ನಡೆಯುವ ಸ್ಥಳಗಳಲ್ಲಿ 250 ಕಡೆ ತಾತ್ಕಾಲಿಕವಾಗಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಸೇಫ್ಟಿ ಶೆಲ್ಟರ್‌ಗಳು, ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗುತ್ತಿದೆ. ಜನದಟ್ಟಣೆ ಇರುವ ಕಡೆ ಡ್ರೋನ್ ಕ್ಯಾಮೆರಾಗಳಿಂದ ಪೊಲೀಸರು ನಿಗಾವಹಿಸಲಿದ್ದಾರೆ. ಈಗಾಗಲೇ ಬಾರ್, ರೆಸ್ಟೋರೆಂಟ್, ಮಾಲ್‌ಗಳ ಮಾಲೀಕರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದರು.
ಎಐ ಕ್ಯಾಮೆರಾಗಳ ಅಳವಡಿಕೆ: ಮುಖಚರ್ಯೆ ಗುರುತಿಸುವ ಎಐ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಅಪರಾಧ ಚಟುವಟಿಕೆ ಹಿನ್ನೆಲೆಯುಳ್ಳವರ ಮಾಹಿತಿ ಎಐ ಕ್ಯಾಮೆರಾದಿಂದ ಗೊತ್ತಾಗಲಿದೆ. ಅಂಥವರು ಕಂಡು ಬಂದರೆ ಕೂಡಲೇ ಎಚ್ಚರಿಕೆ ನೀಡಲು ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದರು.
ಮೊದಲ ಬಾರಿಗೆ ಹೀಟ್ ಮ್ಯಾಪ್:
ಆಂಬ್ಯುಲೆನ್ಸ್, ವಾಹನಗಳು, ಟ್ರಾಫಿಕ್ ಸಮಸ್ಯೆ ಸೇರಿದಂತೆ ಜನರಿಗೆ ಮಾಹಿತಿ ಸಿಗಲು ಕ್ಯೂಆರ್ ಕೋಡ್ ಮೂಲಕ ಮಾಹಿತಿ ಪಡೆಯಬಹುದು. ಇದೇ ಮೊದಲ ಬಾರಿಗೆ ''''ಹೀಟ್ ಮ್ಯಾಪ್'''' ಮಾಡಲಾಗಿದೆ. ಅತೀ ಹೆಚ್ಚು ಜನ ಸೇರಿರುವ ಸ್ಥಳಗಳನ್ನು ಕೆಂಪು ಬಣ್ಣದಿಂದ ಗುರುತಿಸಲಾಗುತ್ತದೆ. ಹಳದಿ ಬಣ್ಣದಿಂದ ಗುರುತಿಸುವ ಸ್ಥಳಗಳನ್ನು ಹೆಚ್ಚಿನ ಜನ ಸೇರುತ್ತಿರುವುದನ್ನು ಸೂಚಿಸುತ್ತದೆ. ಹಸಿರು ಬಣ್ಣ ಇರುವುದು ಕಡಿಮೆ ಜನ ಇರುವುದನ್ನು ಗುರುತಿಸಬಹುದು. ಇದನ್ನು ಕಮಾಂಡ್ ಸೆಂಟರ್‌ನಿಂದ ನಿಗಾ ವಹಿಸಲಾಗುತ್ತದೆ. ಇದನ್ನು ಆಧರಿಸಿ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತರುಗಳಾದ ರಮೇಶ್ ಬಾನೋತ್, ವಂಶಿಕೃಷ್ಣ, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಅಜಯ್ ಹಿಲೋರಿ, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಉಪಸ್ಥಿತರಿದ್ದರು.
ಸಣ್ಣ ಘಟನೆಯಾದರೂ ಸುಮ್ಮನಿರಲ್ಲ: ಪರಂ ತಾಕೀತು
ಜನದಟ್ಟಣೆ ನಿಯಂತ್ರಿಸುವುದನ್ನು ಸರಿಪಡಿಸಿಕೊಳ್ಳಬೇಕು. ಮತ್ತೊಂದು ಕಾಲ್ತುಳಿತ ಆಗಲು ಅವಕಾಶ ನೀಡಬಾರದು, ಸಣ್ಣ ಘಟನೆಯಾದರೂ ನಾನು ಸುಮ್ಮನಿರುವುದಿಲ್ಲ. ಸಂಭ್ರಮಾಚರಣೆ ಸಂದರ್ಭದಲ್ಲಿ ಸಣ್ಣ ಅಹಿತಕರ ಘಟನೆಯಾಗುವುದಕ್ಕೆ ಆಸ್ಪದ ನೀಡಬಾರದು ಎಂದು ಡಾ ಪರಮೇಶ್ವರ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಹೊಸ ವರ್ಷವನ್ನು ಜವಾಬ್ದಾರಿಯಿಂದ ಸಂಭ್ರಮಾಚರಣೆ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗುವುದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಮನೆಯ ಯುವಜನರು ಮನೆಯಿಂದ ಹೊರ ಹೋದ ಬಳಿಕ ವಾಪಸ್ ಮನೆಗೆ ಬರುವವರೆಗೂ ಅವರ ಬಗ್ಗೆ ನಿಗಾವಹಿಸಬೇಕು.
-ಡಾ.ಜಿ.ಪರಮೇಶ್ವರ್, ಗೃಹ ಸಚಿವ

