60% ಲಂಚ ಬಾಂಬ್‌ಗೆ ರಾಜ್ಯ ಭೋವಿ ನಿಗಮದ ಅಧ್ಯಕ್ಷ ಬಲಿ!

| N/A | Published : Sep 06 2025, 05:12 AM IST

Bhovi Nigam Scam Ravikumar Resigns

ಸಾರಾಂಶ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್‌.ರವಿಕುಮಾರ್‌ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

 ಬೆಂಗಳೂರು :  ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್‌.ರವಿಕುಮಾರ್‌ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಕ್ರವಾರ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕರ್ನಾಟಕ ಭೋವಿ ಅಭಿವೃದ್ದಿ ನಿಗಮದಲ್ಲಿ 15 ಕೋಟಿ ರು. ವೆಚ್ಚದಲ್ಲಿ ಭೂ ಒಡೆತನ ಯೋಜನೆ ಜಾರಿಗೊಳಿಸಲಾಗಿತ್ತು. ಈ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಂದ ಶೇ.40ರಿಂದ ಶೇ.60ರಷ್ಟು ಲಂಚಕ್ಕಾಗಿ ಬೇಡಿಕೆ ಇಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ರವಿಕುಮಾರ್‌ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಬಹಿರಂಗಗೊಂಡಿತ್ತು.

ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ರವಿಕುಮಾರ್‌ ಅವರಿಗೆ ತಾಕೀತು ಮಾಡಿದ್ದರು. ಈ ವೇಳೆ ಎಐ ಮೂಲಕ ನನ್ನ ವಿಡಿಯೋ ಸಂಭಾಷಣೆ ತಿರುಚಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ತನಿಖೆಯಲ್ಲಿ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ ಎಂದು ರವಿಕುಮಾರ್‌ ವಾದಿಸಿದ್ದರು. ಇದಕ್ಕೆ ಸಿದ್ದರಾಮಯ್ಯ ಅವರು ಅವಕಾಶ ನೀಡದ ಹಿನ್ನೆಲೆಯಲ್ಲಿ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಶಿವಮೊಗ್ಗದವ ಆಗಿರುವುದರಿಂದ ರಾಜೀನಾಮೆ:

ಹಗರಣದ ಆರೋಪದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿರುವ ರವಿ ಕುಮಾರ್‌ ಅವರು, ನಾನು ಶಿವಮೊಗ್ಗ ನಿವಾಸಿ ಆಗಿರುವುದರಿಂದ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಆಗುತ್ತಿಲ್ಲ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದೇ ವೇಳೆ 2024ರ ಮಾರ್ಚ್‌ 15 ರಿಂದ ಭೋವಿ ನಿಗಮದ ಅಧ್ಯಕ್ಷನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ನನ್ನ ಅವಧಿಯಲ್ಲಿ ನಿಗಮದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ನಿಗಮದಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ, ಅವ್ಯವಹಾರ, ಅಶಿಸ್ತು ಬಯಲಿಗೆಳೆದ ಪರಿಣಾಮ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಸೈಬರ್‌, ಎಫ್ಎಸ್‌ಎಲ್‌ ತಂಡದಿಂದ ತನಿಖೆ ನಡೆಸಿ ಎಐ ತಂತ್ರಜ್ಞಾನ ಬಳಸಿ ವಿಡಿಯೋ ಸಂಭಾಷಣೆ ತಿರುಚಿರುವವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

Read more Articles on