ಬರ, ಮುಂಗಾರು ಕೃಷಿ ಚಟುವಟಿಕೆ ಮಾಹಿತಿ ಪಡೆದ ಸಿಎಂ

| Published : May 24 2024, 10:38 AM IST

Siddaramaiah

ಸಾರಾಂಶ

ವಾಡಿಕೆಗಿಂತ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಮುಜಾಗ್ರತ ಕ್ರಮಕೈಗೊಳ್ಳಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಬಾಗಲಕೋಟೆ : ವಾಡಿಕೆಗಿಂತ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಮುಜಾಗ್ರತ ಕ್ರಮಕೈಗೊಳ್ಳಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆಗಳ ಕುರಿತು ಗುರುವಾರ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಮುಖ್ಯಮಂತ್ರಿಗಳುಬಾಗಲಕೋಟೆ ಜಿಲ್ಲೆಗೆ ಸಂಬಂಧಿಸಿದ ಮಾಹಿತಿ ಪಡೆದುಕೊಂಡ ಅವರು, ಪ್ರಸಕ್ತ ವರ್ಷ ವಾಡಿಕೆಗಿಂತ ಮಳೆಯ ಹೆಚ್ಚಾಗಿದ್ದು, ಕೃಷಿ ಚಟುವಟಿಕೆಗಳು ಪ್ರಾರಂಭವಾಗಿವೆ. ಚುನಾವಣೆ ನೀತಿ ಸಂಹಿತೆ ಜೂನ್ 6ರವರೆಗೆ ಇದ್ದು, ಆಯೋಗ ನೀತಿ ಸಂಹಿತೆ ಸಡಿಲಿಸಿದೆ. ತುರ್ತು ಕೆಲಸಗಳಿಗೆ ಗಮನ ಹರಿಸಿ ಅಭಿವೃದ್ಧಿಯತ್ತ ಗಮನ ಹರಿಸಿ ಜಿಲ್ಲಾಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡುವಂತೆ ಸೂಚನೆ ನೀಡಿದರು. ಟೆಂಡರ್‌ ಕರೆಯಲು ಯಾವುದೇ ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ. ಟೆಂಡರ್‌ ಕರೆದು ಕಾರ್ಯಾದೇಶ ಹೊರಡಿಸುವಲ್ಲಿ ವಿಳಂಬ ಮಾಡಿದಲ್ಲಿ ಅಭಿವೃದ್ಧಿಯಲ್ಲಿ ವಿಳಂಬ ಮಾಡಿದಂತಾಗುತ್ತದೆ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಅಗತ್ಯ ಬೀಜ, ಗೊಬ್ಬರ ಸಂಗ್ರಹ:

ಜಿಲ್ಲೆಯ ಬರ ಮತ್ತು ಕೃಷಿ ಚಟವಟಿಕೆಗಳ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ಕೂಡ ಮಾಡಲಾಗಿದ್ದು, ಸಮರ್ಪಕ ಬೀಜ ಮತ್ತು ಗೊಬ್ಬರ ಪೂರೈಕೆಗೆ ದಾಸ್ತಾನು ಲಭ್ಯವಿದೆ. ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಅಭಾವ ಸೃಷ್ಟಿಯಾಗದಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರೈತ ಸಂಪರ್ಕ ಕೇಂದ್ರಗಳಿಗೆ ಆಗಾಗ್ಗೆ ಭೇಟಿ ನೀಡಿ ದಾಸ್ತಾನು ಪರಿಶೀಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಕುಡಿಯುವ ನೀರಿಗೆ ಸಂಬಂಧಿಸಿದಂತೆ ಗ್ರಾಮೀಣ ಭಾಗದಲ್ಲಿ ನೀರಿನ ತೊಂದರೆಯಾಗದಂತೆ 1045 ಖಾಸಗಿ ಕೊಳವೆಬಾವಿ ಗುರುತಿಸಿದ್ದು, ಸಮಸ್ಯೆ ಬಂದಲ್ಲಿ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನಗರಪ್ರದೇಶಕ್ಕೆ ಸಂಬಂಧಿಸಿದಂತೆ ರಬಕವಿ-ಬನಹಟ್ಟಿ, ಜಮಖಂಡಿ ತೇರದಾಳ ಭಾಗದಲ್ಲಿ ಮೇ ಮಾಹೆಯಲ್ಲಿ ನೀರಿನ ತೊಂದರೆ ಇಲ್ಲ. ಜೂನ್ ಮಾಹೆಯಲ್ಲಿ ಖಾಸಗಿ ಕೊಳವೆಬಾವಿಯಿಂದ ನೀರು ಪೂರೈಕೆ ಕ್ರಮವಹಿಸಲಾಗಿದ್ದು, ಅಗತ್ಯ ಬಿದ್ದಲ್ಲಿ ನೀರಿನ ಲಭ್ಯತೆಗೆ ಅನುಗುಣವಾಗಿ ಬೋರವೆಲ್ ಕೊರೆಯಿಸಲಾಗುವುದು. ಬರ ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸಲು ಪ್ರತಿ ಗುರುವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಸದ್ಯ ₹ 16 ಕೋಟಿ ಇದ್ದು, ಪ್ರತಿ ತಾಲೂಕಿಗೆ ₹ 1 ಕೋಟಿ ನೀಡಲಾಗಿದೆ ಎಂದು ತಿಳಿಸಿದರು. ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ಮುಂಜಾಗ್ರತೆ ಕ್ರಮ ಜರುಗಲಿಸಲು ತಿಳಿಸಿದ ಮುಖ್ಯಮಂತ್ರಿಗಳ ಸೂಚನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಕ್ರಮ ಜರುಗಿಸಲಾಗುವುದೆಂದು ತಿಳಿಸಿದರು.

ಸಂವಾದ ಸಭೆಯಲ್ಲಿ ಜಿಪಂ ಸಿಇಒ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಕಳ್ಳೇನ್ನವರ, ತೋಟಗಾರಿಕೆ ಉಪನಿರ್ದೇಶಕ ರವೀಂದ್ರ ಹಕಾಟೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯ ಮೆಕ್ಕಳಕಿ, ಉಪವಿಭಾಗಾಧಿಕಾರಿಗಳಾದ ಸಂತೋಷ ಜಗಲಾಸರ, ಸಂತೋಷ ಕಾಮಗೌಡ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ಕೂಡ ಮಾಡಲಾಗಿದ್ದು, ಸಮರ್ಪಕ ಬೀಜ ಮತ್ತು ಗೊಬ್ಬರ ಪೂರೈಕೆಗೆ ದಾಸ್ತಾನು ಲಭ್ಯವಿದೆ. ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಅಭಾವ ಸೃಷ್ಟಿಯಾಗದಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

- ಜಾನಕಿ ಕೆ.ಎಂ ಜಿಲ್ಲಾಧಿಕಾರಿ