ಸಾರಾಂಶ
ಸ್ನಾನದ ಮನೆಯಲ್ಲಿ ಕಾಲು ಜಾರಿದ ಪರಿಣಾಮ ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿದ್ದು, ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಗೆ ಮರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಬೆಂಗಳೂರು : ಸ್ನಾನದ ಮನೆಯಲ್ಲಿ ಕಾಲು ಜಾರಿದ ಪರಿಣಾಮ ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾಗಿದ್ದು, ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಗೆ ಮರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಭಾನುವಾರ ಮುಖ್ಯಮಂತ್ರಿ ಅವರು ಚಿಕ್ಕಬಳ್ಳಾಪುರ ಮತ್ತು ಚನ್ನಪಟ್ಟಣ ಪ್ರವಾಸ ಕೈಗೊಳ್ಳಬೇಕಿತ್ತು. ನಂತರ ಬೆಂಗಳೂರಿಗೆ ವಾಪಸಾಗಿ ಸಂಜೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿತ್ತು. ಆದರೆ, ಮಂಡಿನೋವಿನ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ದಿನದ ಕಾರ್ಯಕ್ರಮಗಳನ್ನು ರದ್ದುಪಡಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗ್ಗೆ ಸ್ನಾನದ ಮನೆಗೆ ಹೋದಾಗ ಬಲಗಾಲು ಜಾರಿದ್ದು, ಎಡಗಾಲಿನ ಮೇಲೆ ದೇಹದ ಪೂರ್ಣ ಭಾರ ಬಿಟ್ಟಿದ್ದಾರೆ. ಇದರಿಂದ ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡಿದೆ. ಹೀಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಸುಮಾರು ಗಂಟೆಗಳ ಕಾಲ ವೈದ್ಯರು ತಪಾಸಣೆ ನಡೆಸಿದ್ದು, ಈ ಹಿಂದೆ ಲೆಗಮೆಂಟ್ ಶಸ್ತ್ರಚಿಕಿತ್ಸೆ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಎರಡು ದಿನ ಪ್ರಯಾಣ ಮಾಡದೆ ವಿಶ್ರಾಂತಿ ಪಡೆಯಲು ಸಲಹೆ ನೀಡಿದರು. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.