ಬೆಂಗಳೂರು : ಬಿಡದಿ ಟೌನ್‌ಶಿಪ್‌ ವಿಚಾರವಾಗಿ ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮತ್ತೊಂದು ಪತ್ರ ಬರೆದು ಜೂ.27ರಂದು ಬೈರಮಂಗಲ ಗ್ರಾಮದಲ್ಲಿ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ.

ಜೂ.27ರಂದು ಬೈರಮಂಗಲ ಗ್ರಾಮಕ್ಕೆ ಭೇಟಿ

ಈ ಹಿಂದೆ ನಾನು ನಿಮಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದಂತೆ ಬಿಡದಿಯಲ್ಲಿ ರಚಿಸಲಿರುವ ಗ್ರೇಟರ್‌ ಬೆಂಗಳೂರು ಸಮಗ್ರ ಉಪನಗರ ಯೋಜನೆಯಿಂದ ಬಾಧಿತರಾಗುವ ರೈತರು, ಕೃಷಿ ಕಾರ್ಮಿಕರು, ಹೈನುಗಾರಿಕೆಯಲ್ಲಿ ತೊಡಗಿರುವ ರೈತ ಮಹಿಳೆಯರು, ಸಣ್ಣ ಉದ್ಯಮಿಗಳು ಹಾಗೂ ಗ್ರಾಮಸ್ಥರ ಅಹವಾಲು ಮತ್ತು ಕುಂದು ಕೊರತೆ ಕೇಳಲು ಜೂ.27ರಂದು ನಾನು ಬೈರಮಂಗಲ ಗ್ರಾಮಕ್ಕೆ ಭೇಟಿ ನೀಡುತ್ತಿದ್ದೇನೆ. ಹೀಗಾಗಿ ತಾವು ಕೂಡ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಈ ಬೈರಮಂಗಲ ಗ್ರಾಮಕ್ಕೆ ಭೇಟಿ ನೀಡಿದರೆ, ನಾವಿಬ್ಬರೂ ಖುದ್ದಾಗಿ ಭಾದಿತ ವರ್ಗದ ಜನರ ಸಂಕಷ್ಟಗಳನ್ನು ಆಲಿಸಿ ಸ್ಥಳದಲ್ಲೇ ಪರ್ಯಾಯ ಮಾರ್ಗಗಳನ್ನು ಯೋಚಿಸಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದು ಎಚ್‌.ಡಿ.ಕುಮಾರಸ್ವಾಮಿ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಎಚ್ಡಿಕೆಗೆ ಪತ್ರ ಬರೆದಿದ್ದ ಡಿಕೆಶಿ:

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಜೂ.22ರಂದು ಸುದ್ದಿಗೋಷ್ಠಿ ನಡೆಸಿ ಬಿಡದಿ ಟೌನ್‌ ಶಿಪ್‌ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದರು. ಪಂಥಾಹ್ವಾನ ಸ್ವೀಕರಿಸಿದ್ದ ಡಿ.ಕೆ.ಶಿವಕುಮಾರ್‌ ಅವರು ಐವರು ಪ್ರತಿನಿಧಿಗಳೊಂದಿಗೆ ಜೂ.26 ರಂದು ವಿಧಾನಸೌಧಕ್ಕೆ ತಾವು ಚರ್ಚೆಗೆ ಬರುವಂತೆ ಎಚ್‌.ಡಿ.ಕುಮಾರಸ್ವಾಮಿಗೆ ಅವರಿಗೆ ಪತ್ರ ಬರೆದು ಆಹ್ವಾನಿಸಿದ್ದರು.


ಇದಕ್ಕೆ ಮರು ಪತ್ರ ಬರೆದಿದ್ದ ಎಚ್‌.ಡಿ.ಕುಮಾರಸ್ವಾಮಿ, ಜೂ.26ರಂದು ನನಗೆ ಪೂರ್ವ ಯೋಜಿತ ಕಾರ್ಯಕ್ರಮಗಳಿರುವುದರಿಂದ ಜೂ.27ರಂದು ಬಿಡದಿ ಅಥವಾ ಬೈರಮಂಗಲದ ಸಾರ್ವಜನಿಕ ಸ್ಥಳದಲ್ಲಿ ಬಹಿರಂಗ ಚರ್ಚೆಗೆ ಬರುವಂತೆ ಆಹ್ವಾನಿಸಿದ್ದರು. ಈ ಸಭೆಗೆ ಯೋಜನೆ ಬಾಧಿತರಿಗೂ ಆಹ್ವಾನ ನೀಡುವಂತೆ ಮನವಿ ಮಾಡಿದ್ದರು. ಇದೀಗ ಮತ್ತೊಂದು ಪತ್ರ ಬರೆದು ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದಾರೆ.