ಮತದಾರರ ಪಟ್ಟಿ ಬಳಸಿ ಡಿಜಿಟಲ್‌ ಜಾತಿ ಗಣತಿ

| N/A | Published : Aug 08 2025, 07:30 AM IST

vidhan soudha

ಸಾರಾಂಶ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಡಿಜಿಟಲ್‌ ಸಮೀಕ್ಷೆ ನಡೆಸಲು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದು, ಲಭ್ಯವಿರುವ ಮತದಾರರ ಪಟ್ಟಿಯನ್ನೇ ಸಮೀಕ್ಷೆಗಾಗಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ.

 ಬೆಂಗಳೂರು :  ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಡಿಜಿಟಲ್‌ ಸಮೀಕ್ಷೆ ನಡೆಸಲು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದು, ಲಭ್ಯವಿರುವ ಮತದಾರರ ಪಟ್ಟಿಯನ್ನೇ ಸಮೀಕ್ಷೆಗಾಗಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ.

ರಾಜ್ಯದಲ್ಲಿ ಸೆ.22ರಿಂದ ಮತ್ತೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು.

ಈ ವೇಳೆ ಸಮೀಕ್ಷೆಯನ್ನು ಡಿಜಿಟಲ್ ರೂಪದಲ್ಲಿ ಕೈಗೊಳ್ಳುವುದು. ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ಅಗತ್ಯವಿರುವ ತಂತ್ರಾಂಶ, ಆ್ಯಪ್‌ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಇ-ಆಡಳಿತ ಇಲಾಖೆ ಮೂಲಕ ಕೈಗೊಳ್ಳಲು ಒಪ್ಪಿಗೆ ಸೂಚಿಸಲಾಗಿದೆ. ಸಮೀಕ್ಷೆಯಲ್ಲಿ ನಮೂದಿಸಲಾಗುವ 6 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಯ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲು ಸಹ ನಿರ್ಧರಿಸಲಾಗಿದೆ.

ಇದೇ ವೇಳೆ ಸಮೀಕ್ಷೆಗೆ ಆರ್ಥಿಕ ಇಲಾಖೆ 624 ಕೋಟಿ ರು. ವೆಚ್ಚಕ್ಕೆ ಅನುಮೋದನೆ ನೀಡಿರುವುದನ್ನು ಸಭೆ ಗಮನಕ್ಕೆ ತರಲಾಯಿತು. ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಆಯೋಗದ ಮೇಲುಸ್ತುವಾರಿಯಲ್ಲಿ ಅಗತ್ಯವಿರುವ ಅಧಿಕಾರಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಗಳು ಕೆಲಸ ಮಾಡಲು ಸಚಿವ ಸಂಪುಟ ನಿರ್ಧರಿಸಿತು.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್‌, ನ್ಯಾ. ನಾಗಮೋಹನ್‌ದಾಸ್‌ ಆಯೋಗವು ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಸುವ ವೇಳೆ ಮತದಾರರ ಪಟ್ಟಿಯನ್ನು ಬಳಸಿಕೊಂಡು ಸಮೀಕ್ಷೆ ನಡೆಸಿತ್ತು. ಅದೇ ರೀತಿ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ) ನಡೆಸಲು ಮತದಾರರ ಪಟ್ಟಿ ಬಳಸಿಕೊಳ್ಳಲು ಒಪ್ಪಿಗೆ ನೀಡಿದೆ ಎಂದು ಹೇಳಿದರು.

ಮತದಾರರ ಪಟ್ಟಿ ಪರಿಶೀಲಿಸಿ ಬಳಕೆ:

ಈ ವೇಳೆ ಲೋಕಸಭೆ ವೇಳೆ ಸಿದ್ಧಪಡಿಸಿದ್ದ ಮತದಾರರ ಪಟ್ಟಿ ಬಗ್ಗೆ ನಿಮ್ಮ ನಾಯಕರೇ ಆಕ್ಷೇಪ ಎತ್ತಿದ್ದಾರಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಎಚ್.ಕೆ. ಪಾಟೀಲ್‌, ನಮ್ಮ ನಾಯಕರು ಪ್ರಶ್ನೆ ಎತ್ತಿರುವುದು ನಿಜ. ಜಿಲ್ಲಾಧಿಕಾರಿಗಳು ಮತದಾರರ ಪಟ್ಟಿ ಪರಿಶೀಲಿಸಿ ಸಮಸ್ಯೆಯಿದ್ದರೆ ತಿದ್ದುಪಡಿ ಮಾಡಲಿದ್ದಾರೆ. ಬಳಿಕವೇ ಸಮೀಕ್ಷೆಗೆ ಬಳಸಿಕೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದರು.

ಮರು ಸಮೀಕ್ಷೆ ಏಕೆ?

2015ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕಾಂತರಾಜು ನೇತೃತ್ವದ ಆಯೋಗ ರಚಿಸಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ತೀರ್ಮಾನಿಸಿದ್ದರು. ಅದರಂತೆ ಜಯಪ್ರಕಾಶ್ ಹೆಗ್ಡೆ ಅಧ್ಯಕ್ಷತೆಯ ಆಯೋಗವು 2024ರಲ್ಲಿ ಅಂತಿಮ ವರದಿ ಸಲ್ಲಿಸಿತ್ತು.

ಆದರೆ, ಸಮೀಕ್ಷೆ ಮಾಡಿ ಹತ್ತು ವರ್ಷಗಳು ಕಳೆದಿದೆ. ಹತ್ತು ವರ್ಷಗಳಾದ ನಂತರ ಹೊಸದಾಗಿ ಸಮೀಕ್ಷೆ ನಡೆಸಬೇಕೆಂದು ಹಿಂದುಳಿದ ವರ್ಗಗಳ ಆಯೋಗದ ಸೆಕ್ಷನ್ 11(1) ರಲ್ಲಿ ಹೇಳಲಾಗಿದೆ. ಹೀಗಾಗಿ ಹೊಸದಾಗಿ ಸಮೀಕ್ಷೆ ನಡೆಸಬೇಕು ಎಂದು ಏ.17 ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಈ ಸಂಬಂಧ ಮಧುಸೂದನ್‌ ನಾಯ್ಕ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ.

Read more Articles on