ಸಾರಾಂಶ
ರೈತರಿಗೆ ನೀಡಿರುವ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ರಾಜ್ಯ ಸರ್ಕಾರ ತಾಕೀತು ಮಾಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರು : ರೈತರಿಗೆ ನೀಡಿರುವ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ರಾಜ್ಯ ಸರ್ಕಾರ ತಾಕೀತು ಮಾಡಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಕೂಡಲೇ ರೈತರಿಗೆ ಸಾಲ ನೀಡಿರುವ ಎಲ್ಲಾ ಬ್ಯಾಂಕುಗಳ ಮುಖ್ಯಸ್ಥರ ಸಭೆ ನಡೆಸಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಬೇಕು. ಬರ ಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ (ಟ್ವೀಟರ್) ಖಾತೆಯಲ್ಲಿ ಒತ್ತಾಯಿಸಿದ್ದಾರೆ.
ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ. ಆದರೆ ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ. ಕೇಂದ್ರ ಸರ್ಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿದ್ದ ಬರ ಪರಿಹಾರದ ಹಣವನ್ನು ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕುಗಳ ವರ್ತನೆ ನಿಜಕ್ಕೂ ಕ್ರೂರಾತಿಕೂರವಾಗಿದ್ದು, ಖಂಡನೀಯವಾಗಿದೆ ಎಂದು ಕಿಡಿಕಾರಿದ್ದಾರೆ.
ಮೊದಲೇ ತೀವ್ರ ಬರ, ಬೆಳೆ ನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದಾಗಿದೆ ಎಂದರೆ ತಪ್ಪಲ್ಲ. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದಿದ್ದಾರೆ.