ಸಾರಾಂಶ
ಖಾಸಗಿ ಶಾಲೆಗಳ ಶುಲ್ಕದ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಸರ್ಕಾರಕ್ಕೆ ಅಧಿಕಾರ ಇಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಖಾಸಗಿ ಶಾಲೆಗಳ ಶುಲ್ಕದ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಸರ್ಕಾರಕ್ಕೆ ಅಧಿಕಾರ ಇಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಸಮಗ್ರ ಶಿಕ್ಷಣ ಕರ್ನಾಟಕ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ವೇಳೆ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರಿನ ವಿಬ್ ಗಯಾರ್ ಸೇರಿ ಕೆಲ ಖಾಸಗಿ ಶಾಲೆಗಳು ನಿಗದಿತ ಅವಧಿಯಲ್ಲಿ ತಮ್ಮ ಮಕ್ಕಳ ಶಾಲಾ ಶುಲ್ಕ ಪಾವತಿಸದ ಪೋಷಕರಿಗೆ ಬಡ್ಡಿ ವಸೂಲು ಮಾಡುತ್ತಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಖಾಸಗಿ ಶಾಲೆಗಳ ಶುಲ್ಕದ ವಿಚಾರದಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ನಮಗಿಲ್ಲ. ಈ ಬಗ್ಗೆ ನ್ಯಾಯಾಲಯದ ತೀರ್ಪು ಕೂಡ ಇದೆ. ಹಾಗಾಗಿ ಖಾಸಗಿ ಶಾಲೆಗಳ ದುಬಾರಿ ಶುಲ್ಕ ಸಮಸ್ಯೆ ತಡೆಯಲು ನಮ್ಮ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಎಂದು ಪೋಷಕರಿಗೆ ಮನವಿ ಮಾಡಬಹುದು ಅಷ್ಟೆ ಎಂದು ಹೇಳಿದರು.
ಈ ವೇಳೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಆಯುಕ್ತ ಕೆ.ವಿ. ತ್ರಿಲೋಕಚಂದ್ರ, ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷ ಬಸವರಾಜೇಂದ್ರ, ಪರೀಕ್ಷಾ ನಿರ್ದೇಶಕ ಎಚ್.ಎನ್. ಗೋಪಾಲಕೃಷ್ಣ, ಪಿಯು ಇಲಾಖೆ ನಿರ್ದೇಶಕಿ ಸಿಂಧು ಬಿ. ರೂಪೇಶ್ ಉಪಸ್ಥಿತರಿದ್ದರು.