ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ

| N/A | Published : May 10 2025, 05:37 AM IST

Vidhan soudha

ಸಾರಾಂಶ

ಪ್ರಸಕ್ತ 2025-26ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಇದೇ 15ರಿಂದ ಒಂದು ತಿಂಗಳ ಕಾಲ ನಡೆಯಲಿದೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

  ಬೆಂಗಳೂರು : ಪ್ರಸಕ್ತ 2025-26ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಇದೇ 15ರಿಂದ ಒಂದು ತಿಂಗಳ ಕಾಲ ನಡೆಯಲಿದೆ. ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌, ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6ರಷ್ಟು ಮೀರದಂತೆ ವರ್ಗಾವಣೆ ಪ್ರಕ್ರಿಯೆ ನಡೆಸುವಂತೆ ಸಂಬಂಧ ಪಟ್ಟ ಇಲಾಖೆಗೆ ಸೂಚನೆ ನೀಡಲಾಗಿದೆ. ಇದೇ 15 ರಿಂದ ವರ್ಗಾವಣೆ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಜೂ14ರವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿ ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ. ಗ್ರೂಪ್‌ ಸಿ ಮತ್ತು ಗ್ರೂಪ್‌ ಡಿ ವೃಂದವರಿಗೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಅಧಿಕಾರ ವಹಿಸಲಾಗುವುದು. ವರ್ಗಾವಣೆ ಅವಧಿ ವಿಸ್ತರಿಸುವುದು ಮತ್ತು ವರ್ಗಾವಣೆ ಮಾರ್ಗಸೂಚಿ ಪರಿಷ್ಕರಿಸಲು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಲು ಸಚಿವ ಸಂಪುಟ ಸಭೆ ನಿರ್ಣಯಿಸಿದೆ ಎಂದರು.

ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ:

ಇನ್ನು ಇದೇ ಮೊದಲ ಬಾರಿಗೆ ಅಬಕಾರಿ ಇಲಾಖೆಯಲ್ಲಿ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಮಾಡಲು ತೀರ್ಮಾನಿಸಲಾಗಿದೆ. ಆರೋಗ್ಯ, ಶಿಕ್ಷಣ ಇಲಾಖೆ ಸೇರಿ ಕೆಲವು ಇಲಾಖೆಯಲ್ಲಿ ಮಾತ್ರ ಕೌನ್ಸೆಲಿಂಗ್‌ ವರ್ಗಾವಣೆ ವ್ಯವಸ್ಥೆ ಇದ್ದು, ಇದೀಗ ಅಬಕಾರಿ ಇಲಾಖೆಯಲ್ಲಿಯೂ ಕೌನ್ಸೆಲಿಂಗ್‌ ಮೂಲಕ ಮಾಡಲಾಗುತ್ತದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.