ಸಾರಾಂಶ
ಉತ್ತರ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಮಾ.18 ರಿಂದ ಮೂರು ದಿನ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು : ಉತ್ತರ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಮಾ.18 ರಿಂದ ಮೂರು ದಿನ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಿನದಿಂದ ದಿನಕ್ಕೆ ಬಿಸಿಲತಾಪ ಹೆಚ್ಚಾಗುತ್ತಿದ್ದು, ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಿಗೆ ಉಷ್ಣ ಅಲೆ ವ್ಯಾಪಿಸುವ ಸಾಧ್ಯತೆ ಇದ್ದು, ಪ್ರಮುಖವಾಗಿ ಬಾಗಲಕೋಟೆ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಹಾಗೂ ವಿಜಯಪುರದಲ್ಲಿ ಮಾ.18, 19 ಹಾಗೂ 20 ರಂದು ಉಷ್ಣ ಅಲೆ ಬೀಸಲಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವೂ ವಾಡಿಕೆ ಪ್ರಮಾಣಕ್ಕಿಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಾಗುವ ಲಕ್ಷಣ ಇದೆ ಎಂದು ಎಚ್ಚರಿಕೆ ನೀಡಿದೆ.
ಎರಡು ದಿನ ಮಳೆ: ಉತ್ತರ ಕರ್ನಾಟಕದಲ್ಲಿ ಬಿಸಿಲು ಹೆಚ್ಚಾಗಿದ್ದರೆ, ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಗಾಳಿ ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ, ಮೈಸೂರು, ಕೊಡಗು ಹಾಗೂ ಹಾಸನದ ಒಂದೆರಡು ಕಡೆ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.