ರಾಜಧಾನಿ ಬೆಂಗಳೂರು, ಕರಾವಳಿ, ಮಲೆನಾಡು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ನ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರು : ರಾಜಧಾನಿ ಬೆಂಗಳೂರು, ಕರಾವಳಿ, ಮಲೆನಾಡು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ನ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯದಲ್ಲಿ ಮುಂಗಾರು ಮಾರುತಗಳು ಮತ್ತೆ ಸಕ್ರಿಯವಾಗಿದ್ದು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೋಲಾರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಜು.19ರಿಂದ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಅದೇ ರೀತಿ ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಮುಲ್ಕಿಯಲ್ಲಿ ಅತಿ ಹೆಚ್ಚು 30 ಸೆಂ.ಮೀ. ಮಳೆಯಾಗಿದೆ. ಮಂಗಳೂರು ವಿಮಾನನಿಲ್ದಾಣ ಹಾಗೂ ಶಕ್ತಿನಗರದಲ್ಲಿ ತಲಾ 21, ಮಾಣಿ 19, ಮಂಕಿ 18, ಮಂಗಳೂರು 17, ಸುಳ್ಯ 16, ಪುತ್ತೂರು 15, ಕೋಟ, ಬಂಟ್ವಾಳದಲ್ಲಿ ತಲಾ 14, ಕಾರವಾರ 12, ಉಡುಪಿ, ಶಿರಾಲಿ, ಕಾರ್ಕಳ, ಭಾಗಮಂಡಲದಲ್ಲಿ ತಲಾ 11, ಕುಂದಾಪುರ 10, ಮೂಡಬಿದಿರೆ, ಆಗುಂಬೆಯಲ್ಲಿ ತಲಾ 9 ಸೆಂ.ಮೀ. ಮಳೆಯಾದ ವರದಿಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.