ಸಾರಾಂಶ
ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಟ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು : ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಟ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ರಾಜ್ಯದಲ್ಲಿ ಮಳೆ ಚುರುಕುಗೊಂಡಿದ್ದು, ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ 11 ರಿಂದ 20 ಸೆಂ.ಮೀ.ವರೆಗೆ ಮಳೆಯಾಗುವ ಲಕ್ಷಣ ಇದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದ್ದು, 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆಯೂ ಉತ್ತಮ ಮಳೆ : ಸೋಮವಾರ (ಏ. 22) ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿಯಲ್ಲಿ ಗಾಳಿಯು 30ರಿಂದ 40 ಕಿ.ಮೀ ವೇಗ ಬೀಸಲಿದೆ. ಉತ್ತರ ಒಳನಾಡಿನಲ್ಲಿ ಗಾಳಿಯು 50 ರಿಂದ 60 ಕಿ.ಮೀ ವೇಗದಲ್ಲಿ ಬೀಸಲಿದೆ.
ಕುಮಟಾದಲ್ಲಿ ರಾಜ್ಯದಲ್ಲೇ ಗರಿಷ್ಠ: ಶನಿವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡದ ಕುಮಟಾದಲ್ಲಿ ಅತಿ ಹೆಚ್ಚು 13 ಸೆಂ.ಮೀ ಮಳೆಯಾಗಿದೆ. ಗೋಕರ್ಣದಲ್ಲಿ 10, ಮಂಕಿ 8, ಕೊಪ್ಪ, ಕಮ್ಮರಡಿಯಲ್ಲಿ ತಲಾ 7, ಉಡುಪಿ, ಜಯಪುರ, ಮಂಗಳೂರಿನಲ್ಲಿ ತಲಾ 6, ಕುಂದಾಪುರ, ಬಾಳೆಹೊನ್ನೂರು, ಚಿಕ್ಕಮಗಳೂರಿನಲ್ಲಿ ತಲಾ 5, ಧರ್ಮಸ್ಥಳ, ಕೊಟ್ಟಿಗೆಹಾರದಲ್ಲಿ ತಲಾ 4, ಸಿದ್ದಾಪುರ, ಬೀದರ್, ಕಳಸ, ಕುಶಾಲನಗರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಉಳಿದಂತೆ ರಾಜ್ಯದ ವಿವಿಧ ಕಡೆ ಮಳೆಯಾದ ವರದಿಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.