ಸಾರಾಂಶ
ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ರಾಜ್ಯದ 12 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು : ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ರಾಜ್ಯದ 12 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ಮಳೆ ವ್ಯಾಪಿಸುತ್ತಿದ್ದು, ಉತ್ತರ ಕರ್ನಾಟಕ ಭಾಗದ ಕೆಲವು ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಎಲ್ಲ ಜಿಲ್ಲೆಗಳಿಗೂ ವ್ಯಾಪಿಸಿದೆ. ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ ಮುಂದುವರೆಯುವ ಸೂಚನೆ ಕಂಡು ಬಂದಿದೆ.
ಮುಂದಿನ 24 ಗಂಟೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಮಂಗಳವಾರ ಬೆಳಗ್ಗೆ 8.30ಕ್ಕೆ ಹವಾಮಾನ ಇಲಾಖೆಯ ವರದಿ ಪ್ರಕಾರ, ದಕ್ಷಿಣ ಕನ್ನಡದ ಪುತ್ತೂರು ಹಾಗೂ ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಅತಿ ಹೆಚ್ಚು 10 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಉಪ್ಪಿನಂಗಡಿ, ಗುಂಡ್ಲುಪೇಟೆಯಲ್ಲಿ ತಲಾ 9, ಗೋಕರ್ಣ 8, ಚನ್ನಪಟ್ಟಣ 7, ಕುಮಟಾ 6, ಹರಪನಹಳ್ಳಿಯಲ್ಲಿ 5 ಸೆಂ.ಮೀ ಮಳೆಯಾದ ವರದಿಯಾಗಿದೆ.