ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಮೂರೂ ಜಿಲ್ಲೆಗಳು, ಉತ್ತರ ಒಳನಾಡಿನ ನಾಲ್ಕು ಜಿಲ್ಲೆ, ದಕ್ಷಿಣ ಒಳನಾಡಿನ ರಾಜಧಾನಿ ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗೆ ಯೆಲ್ಲೋ ಅಲರ್ಟ್‌, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. 

ಉತ್ತರ ಒಳನಾಡಿನ ನಾಲ್ಕು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅ.22 ಮತ್ತು ಅ.23ಕ್ಕೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

ಇನ್ನು ದಕ್ಷಿಣ ಒಳನಾಡಿನಲ್ಲಿ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಮೈಸೂರು ಜಿಲ್ಲೆಗಳಿಗೆ ಅ.23ರ ವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಹವಾಮಾನ ವರದಿ ಪ್ರಕಾರ ಕಳೆದ 24 ಗಂಟೆಯಲ್ಲಿ ಶಿವಮೊಗ್ಗದಲ್ಲಿ ಅತಿ ಹೆಚ್ಚು 10 ಸೆಂ.ಮೀ ಮಳೆಯಾಗಿದೆ. ಉಳಿದಂತೆ, ಮಾಗಡಿ 9, ಹೊಸಕೋಟೆ 8, ಬೆಳ್ಳೂರು 7, ಎನ್‌ಆರ್‌.ಪುರ, ತರೀಕೆರೆಯಲ್ಲಿ ತಲಾ 6, ಭದ್ರಾವತಿ, ಔರಾದ್‌ನಲ್ಲಿ ತಲಾ 5, ಮಂಗಳೂರು, ಚಿಕ್ಕಬಳ್ಳಾಪುರ, ಕಡೂರು, ಕೋಲಾರ, ಜಿಕೆವಿಕೆಯಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.