ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗಾಗಿ ಬೆಂಗಳೂರನ್ನು ಹೊರತುಪಡಿಸಿ ಬೇರೆ ಐದು ನಗರಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೂಚಿಸಿದರು.

ಬೆಂಗಳೂರು : ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗಾಗಿ ಬೆಂಗಳೂರನ್ನು ಹೊರತುಪಡಿಸಿ ಬೇರೆ ಐದು ನಗರಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೂಚಿಸಿದರು.

ಕೈಗಾರಿಕಾ ಇಲಾಖೆ ಪ್ರಗತಿ ಪರಿಶೀಲನಾ ಸಭೆ

ಮುಖ್ಯಮಂತ್ರಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಕೈಗಾರಿಕಾ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಡಿ.ಕೆ. ಶಿವಕುಮಾರ್‌, ರಾಜ್ಯದ ವಿವಿಧ ನಗರಗಳಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಹೂಡಿಕೆದಾರರಿಗೆ ವಿಶೇಷ ರಿಯಾಯ್ತಿ ಸೌಲಭ್ಯಗಳನ್ನು ನೀಡುವ ಮೂಲಕ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಉದ್ದೇಶಿಸಲಾಗಿದೆ. ಅದಕ್ಕೆ ವಿಮಾನ ನಿಲ್ದಾಣ ಸೇರಿದಂತೆ ಮತ್ತಿತರ ಮೂಲಸೌಕರ್ಯ ಹೊಂದಿರುವ ಬೆಂಗಳೂರು ಹೊರತುಪಡಿಸಿ ಸೂಕ್ತ ಐದು ನಗರಗಳನ್ನು ಗುರುತಿಸಬೇಕು ಎಂದು ನಿರ್ದೇಶಿಸಿದರು.

ಕೈಗಾರಿಕೋದ್ಯಮಗಳ ಸ್ಥಾಪನೆಗೆ ಏಕಗವಾಕ್ಷಿ ಅನುಮೋದನೆಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು. ಅದಕ್ಕಾಗಿ ಸಂಬಂಧಪಟ್ಟ ಎಲ್ಲ ಇಲಾಖೆಗಳು ನಿಗದಿತ ಕಾಲಮಿತಿಯೊಳಗೆ ಅನುಮೋದನೆ ಪೂರ್ಣಗೊಳಿಸಬೇಕು. ಈ ಕುರಿತು ಆಯಾ ಇಲಾಖಾ ಸಚಿವರೊಂದಿಗೂ ಚರ್ಚಿಸಲಾಗುವುದು. ಏಕಗವಾಕ್ಷಿ ಅನುಮೋದನೆ ವ್ಯವಸ್ಥೆಯಲ್ಲಿ 22 ಇಲಾಖೆಗಳು ಹಾಗೂ 119 ಸೇವೆಗಳನ್ನು ಸಂಯೋಜಿಸಲಾಗಿದೆ. ಡಿಜಿಟಲ್‌ ಹಾಗೂ ಸಮಯೋಚಿತ ಅನುಮೋದನೆಗೆ ಒತ್ತು ನೀಡಲಾಗಿದೆ. ನೀತಿ ಆಯೋಗದ ಹೂಡಿಕೆದಾರ ಸ್ನೇಹಿ ಸೂಚ್ಯಂಕದಲ್ಲಿ ಕರ್ನಾಟಕ 9ನೇ ಸ್ಥಾನದಲ್ಲಿದೆ. ಅದನ್ನು ಇನ್ನಷ್ಟು ಉತ್ತಮ ಪಡಿಸಲು ಕ್ರಮ ಕೈಗೊಳ್ಳಬೇಕು ಎಂದರು.

5.58 ಲಕ್ಷ ಕೋಟಿ ರು. ಹೂಡಿಕೆ ಆಕರ್ಷಿಸಿ 3ನೇ ಸ್ಥಾನ

ಇದೇ ವೇಳೆ ಅಧಿಕಾರಿಗಳು, ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕ ತಯಾರಿಕಾ ವಲಯದಲ್ಲಿ 5.58 ಲಕ್ಷ ಕೋಟಿ ರು. ಹೂಡಿಕೆ ಆಕರ್ಷಿಸಿ 3ನೇ ಸ್ಥಾನದಲ್ಲಿದೆ. ಸೆಮಿ ಕಂಡಕ್ಟರ್‌, ಏರೋಸ್ಪೇಸ್‌, ಕ್ಲೀನ್‌ ಮೊಬಿಲಿಟಿ ಸೇರಿದಂತೆ ಇನ್ನಿತರ ವಲಯಗಳಲ್ಲಿ ಹೂಡಿಕೆಗೆ ವಿಶೇಷ ಉತ್ತೇಜನ ನೀಡಲಾಗಿದೆ ಎಂದು ವಿವರಿಸಿದರು.

ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌, ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಎಲ್‌.ಕೆ. ಅತೀಕ್‌, ಅಪರ ಮುಖ್ಯ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌, ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್‌, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎಸ್‌. ಸೆಲ್ವಕುಮಾರ್‌ ಇತರರಿದ್ದರು.