ಸಾರಾಂಶ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಬುಧವಾರದಿಂದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಬುಧವಾರದಿಂದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬುಧವಾರದಿಂದ ಕರಾವಳಿ ಹಾಗೂ ಒಳನಾಡು ಭಾಗದಲ್ಲಿ ಇನ್ನಷ್ಟು ಮಳೆ ಹೆಚ್ಚಾಗಲಿದೆ.
ಹಾಗಾಗಿ, ಅ.16 ಮತ್ತು 17ಕ್ಕೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಅ.18ಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅ.18 ಮತ್ತು 19ಕ್ಕೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅ.18ಕ್ಕೆ ತುಮಕೂರು, ಶಿವಮೊಗ್ಗ, ರಾಮನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಹವಾಮಾನ ವರದಿ ಪ್ರಕಾರ ಕಳೆದ 24ಗಂಟೆಯಲ್ಲಿ ಕಾರ್ಕಳ, ಬಾಳೆಹೊನ್ನೂರಿನಲ್ಲಿ ಅತಿ ಹೆಚ್ಚು ತಲಾ 5 ಸೆಂ.ಮೀ. ಮಳೆಯಾಗಿದೆ. ನಂಜನಗೂಡು, ಜಯಪುರದಲ್ಲಿ ತಲಾ 4, ಬೆಳ್ಳೂರು, ಸೋಮವಾರಪೇಟೆ, ಸರಗೂರಿನಲ್ಲಿ ತಲಾ 3, ಉಪ್ಪಿನಂಗಡಿ, ಕದ್ರಾ ಸೇರಿದಂತೆ ಮೊದಲಾದ ಕಡೆ 2 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.