ಸಾರಾಂಶ
ಇಂಧನ ಸಚಿವ ಕೆ.ಜೆ.ಜಾರ್ಜ್ ಆಪ್ತರು ಎನ್ನಲಾದ ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಎಲೆಕ್ಟ್ರಿಕ್ ಗುತ್ತಿಗೆದಾರರ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು : ಇಂಧನ ಸಚಿವ ಕೆ.ಜೆ.ಜಾರ್ಜ್ ಆಪ್ತರು ಎನ್ನಲಾದ ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಎಲೆಕ್ಟ್ರಿಕ್ ಗುತ್ತಿಗೆದಾರರ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಂಬಸ್ಸಿ ಗ್ರೂಪ್‌ನ ಮುಖ್ಯಸ್ಥರು, ನಿರ್ದೇಶಕರು ಹಾಗೂ ಎಲೆಕ್ಟ್ರಿಕ್ ಗುತ್ತಿಗೆದಾರರ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಮಹತ್ವದ ದಾಖಲೆಗಳು ಪತ್ತೆಯಾಗಿದ್ದು, ಪರಿಶೀಲನೆ ಮುಂದುವರೆಸಿದ್ದಾರೆ. ಕೆಲವು ವ್ಯವಹಾರಗಳ ಹಿನ್ನೆಲೆಯಲ್ಲಿ ಐಟಿ ಸರ್ವೇ ನಡೆಸಲಾಗಿದೆ ಎನ್ನಲಾಗಿದೆ.
ಜು.28ರಂದು ಸಹ ಇಬ್ಬರು ಎಲೆಕ್ಟ್ರಿಕ್ ಗುತ್ತಿಗೆದಾರರ ಮನೆ, ಕಚೇರಿಗಳು ಸೇರಿ 12 ಕಡೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದರು. ಇದರ ಮುಂದುವರೆದ ಭಾಗವಾಗಿ ಬುಧವಾರವೂ ನಗರದ ಕೆಲ ಎಲೆಕ್ಟ್ರಿಕ್ ಗುತ್ತಿಗೆದಾರರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯ ಸರ್ಕಾರದ ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಇಂಧನ ಸಚಿವ ಜಾರ್ಜ್ ಸೇರಿ ಬೆಸ್ಕಾಂನ ಕೆಲ ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಜಾರ್ಜ್ ಆಪ್ತರೆನ್ನಲಾದ ಎಲೆಕ್ಟ್ರಿಕ್ ಗುತ್ತಿಗೆದಾರರು, ರಿಯಲ್ ಎಸ್ಟೇಟ್ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ಈ ದಾಳಿ ಕುರಿತು ಆದಾಯ ತೆರಿಗೆ ಇಲಾಖೆ ಈವರೆಗೂ ಮಾಹಿತಿ ನೀಡಿಲ್ಲ.