180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ

| N/A | Published : Nov 04 2025, 11:42 AM IST

Karnataka High court
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Share this Article
  • FB
  • TW
  • Linkdin
  • Email

ಸಾರಾಂಶ

ಈ ತಿಂಗಳಾಂತ್ಯಕ್ಕೆ ಕೊನೆಗೊಳ್ಳಲಿರುವ ರಾಜ್ಯದ 180ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಲು 150 ದಿನ ಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

  ಬೆಂಗಳೂರು :  ಈ ತಿಂಗಳಾಂತ್ಯಕ್ಕೆ ಕೊನೆಗೊಳ್ಳಲಿರುವ ರಾಜ್ಯದ 180ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಲು 150 ದಿನ ಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಲು ವಿಳಂಬವಾದ ಹಿನ್ನೆಲೆಯಲ್ಲಿ 16 ತಿಂಗಳ ಕಾಲ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ್ದ ಅವಧಿಯನ್ನು ತಮ್ಮ ಐದು ವರ್ಷದ ಅಧಿಕಾರವಧಿಗೆ ಪರಿಗಣಿಸಬಾರದು ಹಾಗೂ ಅವಧಿ ಮುಗಿಯಲಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿಗಳ ನೇಮಕ ಕ್ರಮಕ್ಕೆ ಮುಂದಾಗದಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ 65ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಪ್ರತ್ಯೇಕವಾಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

ಸೋಮವಾರ ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್‌ ದತ್ ಯಾದವ್ ಅವರ ಪೀಠಕ್ಕೆ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೆಟ್ ಜನರಲ್ ಪ್ರತಿಮಾ ಹೊನ್ನಾಪುರ ಈ ವಿಷಯ ತಿಳಿಸಿದರು.

 ಮತದಾರರ ಪಟ್ಟಿ ತಯಾರಿಸಲು ಅನುಮತಿ ನೀಡಬೇಕು ಎಂದು ಕೋರಿಕೆ

ರಾಜ್ಯ ಚುನಾವಣಾ ಆಯೋಗದ ಪರ ವಕೀಲರು, ಕೆಲ ನಗರ ಸ್ಥಳೀಯ ಸಂಸ್ಥೆಗಳಿಗಷ್ಟೇ ವಾರ್ಡ್ ಪುನರ್ ವಿಂಗಡಣೆ ಮಾಡಬೇಕಿದೆ. ಇದಾದ ನಂತರ ಸರ್ಕಾರ ಮೀಸಲಾತಿ ನಿಗದಿ ಪ್ರಕ್ರಿಯೆ ಆರಂಭಿಸುತ್ತಿದ್ದಂತೆ, ಆಯೋಗಕ್ಕೆ ಮತದಾರರ ಪಟ್ಟಿ ತಯಾರಿಸಲು ಅನುಮತಿ ನೀಡಬೇಕು ಎಂದು ಕೋರಿದರು.

ವಿಚಾರಣೆ  ನ.11ಕ್ಕೆ ಮುಂದೂಡಿಕೆ

ಸರ್ಕಾರ ಮತ್ತು ಚುನಾವಣಾ ಆಯೋಗದ ವಾದ ಆಲಿಸಿದ ನ್ಯಾಯಪೀಠ, ನಗರ ಸ್ಥಳೀಯ ಸಂಸ್ಥೆಗಳಿಗೆ ಯಾವಾಗ ಚುನಾವಣೆ ನಡೆಸುತ್ತೀರಿ, ಅದಕ್ಕೂ ಮೊದಲು ವಾರ್ಡ್ ಪುನರ್ ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆ ನಿರ್ದಿಷ್ಟವಾಗಿ ಯಾವ ಕಾಲಮಿತಿಯಲ್ಲಿ ಮುಗಿಯಲಿದೆ? ಈ ಪ್ರಕ್ರಿಯೆ ನಡೆಯುತ್ತಿರುವಾಗಲೇ ಚುನಾವಣಾ ಆಯೋಗ ಮತದಾರರ ಪಟ್ಟಿ ತಯಾರಿಸುವ ಕಾರ್ಯ ನಡೆಸಬಹುದೇ ಎಂಬ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಬುಧವಾರ (ನ.5)ರಂದು ಸಭೆ ನಡೆಸಿ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ನ.11ಕ್ಕೆ ಮುಂದೂಡಿತು.

ಇದಕ್ಕೂ ಮನ್ನ ಸರ್ಕಾರಿ ವಕೀಲರು, ಅವಧಿ ಮುಗಿಯಲಿರುವ ಸುಮಾರು 188 ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಲಾಗುತ್ತದೆ. ಜತೆಗೆ ಕೆಲ ಸ್ಥಳೀಯ ಸಂಸ್ಥೆಗಳ ವಾರ್ಡ್‌ಗಳನ್ನು ಪುನರ್ ವಿಂಗಡಣೆ ಮಾಡಬೇಕಿದೆ. ಮೊದಲು ಕರಡು ಹೊರಡಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಿ ಅವುಗಳನ್ನು ಇತ್ಯರ್ಥಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಬೇಕಾಗುತ್ತದೆ. ಇದಕ್ಕೆ 150 ದಿನಗಳು ಬೇಕಾಗುತ್ತದೆ. ಮೀಸಲಾತಿ ಅಂತಿಮ ಅಧಿಸೂಚನೆ ಬಳಿಕ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು. ಬಳಿಕ ಆಯೋಗ ಮುಂದಿನ ಪ್ರಕ್ರಿಯೆ ಪ್ರಾರಂಭಿಸಬಹುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.

Read more Articles on