ಸ್ವಪಕ್ಷದ ಸಚಿವರ ವಿರುದ್ಧವೇ ದೂರಲು ಎಂಬಿಪಾ ಸಿದ್ಧತೆ

| N/A | Published : May 04 2025, 10:29 AM IST

MB Patil on honeytrap

ಸಾರಾಂಶ

ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ದುರುದ್ದೇಶದಿಂದ ನನ್ನ ವಿರುದ್ಧ ಮುಸ್ಲಿಮರನ್ನು ಎತ್ತಿ ಕಟ್ಟಲು ಪ್ರಯತ್ನಿಸುತ್ತಿದ್ದಾರೆ - ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬೆಂಗಳೂರು : ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ದುರುದ್ದೇಶದಿಂದ ನನ್ನ ವಿರುದ್ಧ ಮುಸ್ಲಿಮರನ್ನು ಎತ್ತಿ ಕಟ್ಟಲು ಪ್ರಯತ್ನಿಸುತ್ತಿದ್ದಾರೆ. ಈ ವಿಚಾರವನ್ನು ಹೈಕಮಾಂಡ್‌ ಗಮನಕ್ಕೆ ತರುತ್ತೇನೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಸ್ಲಿಂ ಸಮುದಾಯದ ಗುರುಗಳ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ನೀಡಿದ್ದ ಹೇಳಿಕೆ ಖಂಡಿಸಿ ಇತ್ತೀಚೆಗೆ ವಿಜಯಪುರದಲ್ಲಿ ಮುಸ್ಲಿಂ ಸಮುದಾಯದಿಂದ ವಿಜಯಪುರದಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಶಿವಾನಂದ ಪಾಟೀಲ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಈ ಸಭೆಗೆ ಬರಬೇಕಿತ್ತು. ಬರುತ್ತಾರೆಂದು ಭಾವಿಸಿದ್ದೆ. ಆದರೆ ಏಕೆ ಬರಲಿಲ್ಲ ಎಂದು ಗೊತ್ತಿಲ್ಲ? ಎಂದು ಹೇಳುವ ಮೂಲಕ ಮುಸ್ಲಿಮರಲ್ಲಿ ನನ್ನ ಬಗ್ಗೆ ತಪ್ಪು ಸಂದೇಶ ರವಾನಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿದರು.

ಈಗ ನಾವಿಬ್ಬರೂ ಒಂದೇ ಪಕ್ಷದಲ್ಲಿರುವ ಕಾರಣ ಪರಸ್ಪರ ದ್ವೇಷ ಸಾಧಿಸದೆ ಪಕ್ಷ ಸಂಘಟನೆಯ ಕೆಲಸ ಮಾಡಬೇಕು ಎಂದು ಸಚಿವ ಶಿವಾನಂದ ಪಾಟೀಲ್‌ಗೆ ಎಂ.ಬಿ.ಪಾಟೀಲ್ ಸಲಹೆ ನೀಡಿದರು.