ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದ್ದು, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿದಂತೆ ಶನಿವಾರ ವಿವಿಧೆಡೆ ಉತ್ತಮ ಮಳೆಯಾಗಿದೆ. ಶೃಂಗೇರಿಯಲ್ಲಿ ಮಳೆ ಆರ್ಭಟ ಹೆಚ್ಚಾಗಿದ್ದು, ಅಪಾಯದ ಮಟ್ಟ ಮೀರಿ ತುಂಗಾ ನದಿ ಹರಿಯುತ್ತಿದ್ದೆ.
ಬೆಳಗಾವಿ ಜಿಲ್ಲೆಯಲ್ಲಿ ವರುಣನ ಆರ್ಭಟ
ಬೆಳಗಾವಿ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಧಾರಾಕಾರ ಮಳೆಯಿಂದಾಗಿ ಬೃಹತ್ ಗಿಡಮರಗಳು ಹಾಗೂ ವಿದ್ಯುತ್ ಕಂಬಗಳು ರಸ್ತೆಗೆ ಉರುಳಿವೆ. ನಗರದ ರಾಣಿ ಚನ್ನಮ್ಮ ವೃತ್ತ ಸೇರಿ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ಚಿಕ್ಕೋಡಿ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಇರುವ ನ್ಯಾಯಾಲಯದ ಆವರಣ ಸಂಪೂರ್ಣ ಕೆರೆಯಂತಾಗಿದೆ. ಜೋಡಕುರುಳಿ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ 7 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನಾದ್ಯಂತ ಅಬ್ಬರದ ಮಳೆ
ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನಾದ್ಯಂತ ಅಬ್ಬರದ ಮಳೆಯಾಗಿದೆ. ತುಂಗಾನದಿ ಉಗಮಸ್ಥಳ ಪಶ್ಚಿಮಘಟ್ಟಗಳ ತಪ್ಪಲು ಸುತ್ತಮುತ್ತಲ ಪ್ರದೇಶಗಳಲ್ಲಿ ತುಂಗಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಮಳೆ ನಡುವೆಯೂ ಶೃಂಗೇರಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕಡಿಮೆ ಪ್ರಮಾಣದಲ್ಲಿ ಮಳೆ ಸುರಿದಿದೆ. ಇನ್ನು ಜು.5ರಂದು ಭಾನುವಾರ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜು.6ರ ನಂತರ 3 ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
