ಸಾರಾಂಶ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಹಾಗೂ ಇನ್ನಿತರರ ವಿರುದ್ಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ.
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಹಾಗೂ ಇನ್ನಿತರರ ವಿರುದ್ಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ.
ಮುಚ್ಚಿದ ಲಕೋಟೆಯಲ್ಲಿ ಧಾರವಾಡ ಹೈಕೋರ್ಟ್ ಪೀಠಕ್ಕೆ ವರದಿ ಸಲ್ಲಿಕೆಯಾಗಲಿದ್ದು, ನ್ಯಾ.ನಾಗಪ್ರಸನ್ನ ಅವರ ಪೀಠಕ್ಕೆ ಸಲ್ಲಿಸಲಾಗುವುದು ಎಂದು ಮೂಲಗಳು ಖಚಿತಪಡಿಸಿವೆ.
ನ್ಯಾ. ನಾಗಪ್ರಸನ್ನ ಪೀಠವು ಜ.27ರೊಳಗೆ ತನಿಖಾ ವರದಿ ಸಲ್ಲಿಕೆ ಮಾಡುವಂತೆ ಗಡುವು ನಿಗದಿ ಮಾಡಿರುವುದರಿಂದ ಸೋಮವಾರ ಸಲ್ಲಿಕೆ ಮಾಡಲಾಗುತ್ತಿದೆ. ಲೋಕಾಯುಕ್ತ ಪೊಲೀಸರು ತನಿಖೆಯ ಪೂರ್ಣ ವರದಿ ಸಲ್ಲಿಕೆ ಮಾಡುವುದು ಅನುಮಾನವಾಗಿದ್ದು, ಮಧ್ಯಂತರ ವರದಿ ಸಲ್ಲಿಕೆ ಮಾಡುವ ನಿರೀಕ್ಷೆ ಇದೆ ಎನ್ನಲಾಗಿದೆ.
ಈಗಾಗಲೇ ಮೈಸೂರು ಲೋಕಾಯುಕ್ತ ಪೊಲೀಸರು ಲೋಕಾಯುಕ್ತ ಐಜಿಪಿ ಡಾ.ಎ.ಸುಬ್ರಹ್ಮಣ್ಯೇಶ್ವರ್ ರಾವ್ ಅವರಿಗೆ ವರದಿಯನ್ನು ತಲುಪಿಸಿದ್ದಾರೆ. ಐಜಿಪಿ ನೇತೃತ್ವದಲ್ಲಿಯೇ ನ್ಯಾಯಾಲಯದಲ್ಲಿ ವರದಿ ಸಲ್ಲಿಕೆಯಾಗಲಿದೆ. ತನಿಖೆಯ ಕುರಿತು ಐಜಿಪಿ ಸುಬ್ರಹ್ಮಣ್ಯೇಶ್ವರ್ ಹಲವು ಸಭೆಗಳನ್ನು ನಡೆಸಿ ವರದಿ ಸಿದ್ಧಪಡಿಸಿದ್ದಾರೆ. ವರದಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರರ ವಿರುದ್ಧ ಕೇಳಿ ಬಂದಿರುವ ಆರೋಪಗಳ ಪಾತ್ರದ ಕುರಿತು ಉಲ್ಲೇಖ ಇದೆ. ನ್ಯಾಯಾಲಯಕ್ಕೆ ಸಲ್ಲಿಕೆಯ ಬಳಿಕ ವರದಿಯಲ್ಲಿನ ಅಂಶಗಳ ಬಗ್ಗೆ ತಿಳಿದುಬರಲಿದೆ ಎಂದು ತಿಳಿದುಬಂದಿದೆ.
ಮುಡಾದಲ್ಲಿ ಅಕ್ರಮವಾಗಿ ನಿವೇಶನ ಹಂಚಿಕೆಯಾಗಿದ್ದು, ಅವ್ಯವಹಾರ ನಡೆದಿದೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೂರು ಸಲ್ಲಿಕೆ ಮಾಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯದ ಪ್ರಕರಣ ದಾಖಲಿಸಿಕೊಂಡು ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಬಳಿಕ ವಿಚಾರಣೆ ಹೈಕೋರ್ಟ್ ಮೆಟ್ಟಿಲೇರಿದ ಕಾರಣ ತನಿಖಾ ವರದಿಯು ಅಲ್ಲಿಯೇ ಸಲ್ಲಿಕೆಯಾಗಲಿದೆ.
ನಿವೇಶನ ಹಂಚಿಕೆ ವಿಚಾರದಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಈ ಜಾಗವನ್ನು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು. ಇದು ಒಟ್ಟು 1,48,104 ಚದರ ಅಡಿ ಜಾಗ ಇದ್ದು, ಅದರ ಬದಲಿಗೆ ಮುಡಾ 2021ರಲ್ಲಿ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಕೊಟ್ಟಿದ್ದಾರೆಂದು ಚರ್ಚೆಗೆ ಕಾರಣವಾಗಿ ವಿವಾದ ಸೃಷ್ಟಿಸಿತ್ತು.