ಬಿಬಿಎಂಪಿ ವ್ಯಾಪ್ತಿಯಲ್ಲಿ ಡಿಕೆಶಿಯಿಂದ ಶೇ.15ರಷ್ಟು ಕಮಿಷನ್ - ಡಿಸಿಎಂ ವಿರುದ್ಧ ರಾಜ್ಯಪಾಲರಿಗೆ ಶಾಸಕ ದೂರು : ಮುನಿರತ್ನ

| N/A | Published : Apr 14 2025, 09:44 AM IST

Muniratna
ಬಿಬಿಎಂಪಿ ವ್ಯಾಪ್ತಿಯಲ್ಲಿ ಡಿಕೆಶಿಯಿಂದ ಶೇ.15ರಷ್ಟು ಕಮಿಷನ್ - ಡಿಸಿಎಂ ವಿರುದ್ಧ ರಾಜ್ಯಪಾಲರಿಗೆ ಶಾಸಕ ದೂರು : ಮುನಿರತ್ನ
Share this Article
  • FB
  • TW
  • Linkdin
  • Email

ಸಾರಾಂಶ

  ಎರಡು ಸಾವಿರ ಕೋಟಿ ರು. ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೇ.15ರಷ್ಟು ಕಮಿಷನ್‌ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಮುನಿರತ್ನ   ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಎರಡು ಸಾವಿರ ಕೋಟಿ ರು. ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೇ.15ರಷ್ಟು ಕಮಿಷನ್‌ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಮುನಿರತ್ನ ಅವರು ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಭಾನುವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌ ಅವರನ್ನು ಖುದ್ದಾಗಿ ಭೇಟಿ ಮಾಡಿದ ಮುನಿರತ್ನ ಅವರು, ಬೆಂಗಳೂರು ನಗರ ಅಭಿವೃದ್ಧಿ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ವಿರುದ್ದ ಕೆಲವು ದಾಖಲೆಗಳನ್ನು ಸಲ್ಲಿಸಿ ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದೂರು ದಾಖಲಿಸಿ ಅವರನ್ನು ತನಿಖೆಗೆ ಒಳಪಡಿಸಬೇಕು. ಇದೊಂದು ಬೃಹತ್ ಭ್ರಷ್ಟಾಚಾರದ ಪ್ರಕರಣವಾಗಿರುವುದರಿಂದ ತನಿಖೆಯ ಅಗತ್ಯವಿದೆ. ಮಂಗಳವಾರ ಇದರ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್ ಹಾಕಲಾಗುವುದು ಎಂದು ತಿಳಿಸಿದರು.

ಸ್ಟಾರ್‌ ಚಂದ್ರುಗೆ ₹232 ಕೋಟಿ ಮೊತ್ತದ ಕಾಮಗಾರಿ:

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಸ್ಟಾರ್‌ ಚಂದ್ರು ಅವರ ಸ್ಟಾರ್‌ ಬಿಲ್ಡರ್ಸ್‌ಗೆ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ 232 ಕೋಟಿ ರು. ಮೊತ್ತದ ಕಾಮಗಾರಿಗಳ ಗುತ್ತಿಗೆ ನೀಡಿದ್ದಾರೆ. ಈ ಎಲ್ಲ ಅಕ್ರಮಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಬೇಕು ಎಂದು ಹೇಳಿದರು.

ಶಿವಕುಮಾರ್ ನಡೆಸುತ್ತಿರುವ ಭ್ರಷ್ಟಾಚಾರ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ತರಲಾಗಿದೆ. ಬೆಂಗಳೂರು ನಗರಕ್ಕೆ ಎರಡು ಸಾವಿರ ಕೋಟಿ ರು. ಅನುದಾನವನ್ನು ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ. ಇದರಲ್ಲಿ ವಿಶ್ವಬ್ಯಾಂಕ್‌ನಿಂದ ಸಾಲ ರೂಪದಲ್ಲಿ 1,700 ಕೋಟಿ ರು. ಪಡೆಯಲಾಗಿದೆ ಮತ್ತು ಸಾರ್ವಜನಿಕ ತೆರಿಗೆ 300 ಕೋಟಿ ರು. ಅನುದಾನವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದರು.

ಆಂಧ್ರ ಪ್ರದೇಶ, ತೆಲಂಗಾಣ ಸಿಎಂ ಸಂಬಂಧಿಗಳಿಗೆ ಗುತ್ತಿಗೆ

ವಿವಿಧ ಕಾಮಗಾರಿಗಳ ಗುತ್ತಿಗೆ ನೀಡಲು ಟೆಂಡರ್‌ ಕರೆಯದೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅವರ ಸಂಬಂಧಿಗಳಿಗೆ ಗುತ್ತಿಗೆ ನೀಡಲು ಮುಂದಾಗಿದ್ದು, ಡಿ.ಕೆ.ಶಿವಕುಮಾರ್‌ ಅವರ ಪರವಾಗಿ ಯುವ ಕಾಂಗ್ರೆಸ್‌ ಅಧ್ಯಕ್ಷ ಮಂಜುನಾಥ್ ಗೌಡ ಗುತ್ತಿಗೆದಾರರಿಂದ ಶೇ 15ರಷ್ಟು ಕಮಿಷನ್‌ ಈಗಾಗಲೇ ಪಡೆದಿದ್ದಾರೆ ಎಂದು ದೂರಿದರು. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಸಹ ಇದರಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ರಾಜ್ಯದ ಗುತ್ತಿಗೆದಾರರ ಬಿಡ್‌ಗಳನ್ನು ಅನಗತ್ಯವಾಗಿ ತಿರಸ್ಕರಿಸುತ್ತಿದ್ದಾರೆ. ಕೆಲವು ಕಾಮಗಾರಿಗಳಲ್ಲಿ ತಮ್ಮದೇ ಬೇನಾಮಿ ಕಂಪನಿಗಳ ಮೂಲಕ ಟೆಂಡರ್‌ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದು, ಗುತ್ತಿಗೆ ಪಡೆದಿದ್ದಾರೆ ಎಂದು ಆರೋಪಿಸಿದರು.