ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ಕಾರ್ಯಕ್ರಮಗಳನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ಸಂಬಂಧ ರಾಜ್ಯ ಸರ್ಕಾರ ಆದೇಶಿಸಿದೆ.

ಬೆಂಗಳೂರು : ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ಕಾರ್ಯಕ್ರಮಗಳನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ಸಂಬಂಧ ರಾಜ್ಯ ಸರ್ಕಾರ ಆದೇಶಿಸಿದೆ.

ಕೇಂದ್ರ ಸರ್ಕಾರ ‘ವಂದೇ ಮಾತರಂ’ 150ನೇ ವರ್ಷಾಚರಣೆ ಸಂದರ್ಭದಲ್ಲಿ ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂನ ಎಲ್ಲ ಆರು ಚರಣಗಳನ್ನು ಹಾಡುವಂತೆ ಕೇಂದ್ರ ಗೃಹ ಸರ್ಕಾರ ನಿರ್ದೇಶನ ನೀಡಿತ್ತು. ಆದರೆ ಆಗಸ್ಟ್ ತಿಂಗಳಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಂದೇ ಮಾತರಂ ಕುರಿತು 1937ರಲ್ಲಿ ಅಂಗೀಕರಿಸಲಾದ ತನ್ನ ನಿರ್ಣಯವನ್ನು ಪಾಲಿಸಲು ನಿರ್ಧರಿಸಿತು.

ಅದರಂತೆ, ಕಾಂಗ್ರೆಸ್‌ ಪಕ್ಷದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣಗಳನ್ನು ಮಾತ್ರ ಹಾಡಲಾಗುತ್ತದೆ. ಇದಕ್ಕೆ ಪೂರಕವಾಗಿ ರಾಜ್ಯ ಕಾಂಗ್ರೆಸ್‌ ಸರ್ಕಾರ ವಂದೇ ಮಾತರಂನ ಎರಡು ಚರಣಗಳನ್ನು ಮಾತ್ರ ಹಾಡಲು ಆದೇಶಿಸಿದೆ.

ಸರ್ಕಾರಿ ಆದೇಶ:

ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು ವಂದೇ ಮಾತರಂ ರಾಷ್ಟ್ರೀಯ ಗೀತೆಯ ಅಧಿಕೃತ ಆವೃತ್ತಿ ಹಾಗೂ ವಿವಿಧ ಸರ್ಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದರ ಗಾಯನ ಅಥವಾ ವಾದನಕ್ಕೆ ಸಂಬಂಧಿಸಿ ಸಂದರ್ಭಾನುಸಾರ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಭಾರತ ಸರ್ಕಾರದ ಮಾರ್ಗಸೂಚಿಗಳಲ್ಲಿ ರಾಷ್ಟ್ರೀಯ ಗೀತೆಯ ವಾದನ ಮತ್ತು ಸಾಮೂಹಿಕ ಗಾಯನಕ್ಕೆ ಸಂಬಂಧಿಸಿದ ಸಂದರ್ಭಗಳನ್ನು ಪ್ರತ್ಯೇಕವಾಗಿ ನಿರ್ದಿಷ್ಟಪಡಿಸಲಾಗಿದೆ.

ಸಂದರ್ಭಕ್ಕೆ ಅನುಗುಣವಾಗಿ ವಂದೇ ಮಾತರಂ ಗಾಯನ

ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ವಂದೇ ಮಾತರಂ ರಾಷ್ಟ್ರೀಯ ಗೀತೆಯ ವಾದನ/ಗಾಯನಕ್ಕೆ ಸಂಬಂಧಿಸಿ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಅಗತ್ಯವನ್ನು ಸರ್ಕಾರ ಪರಿಗಣಿಸಿದೆ.

ಈ ಹಿನ್ನೆಲೆಯಲ್ಲಿ ಸಚಿವ ಸಂಪುಟದ ತೀರ್ಮಾನದಂತೆ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ಕಾರ್ಯಕ್ರಮಗಳನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.