ಸಾರಾಂಶ
ರಾಜ್ಯದಲ್ಲಿ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿರುವುದು ಜನರು ಅಥವಾ ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟಪಡಿಸಿದೆ
ಬೆಂಗಳೂರು : ರಾಜ್ಯದಲ್ಲಿ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿರುವುದು ಜನರು ಅಥವಾ ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟಪಡಿಸಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಆಯೋಗವು, ಸೆ.22 ರಿಂದ ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಾರಂಭಿಸಲಾಗಿದೆ. ರಾಜ್ಯದ ಸಂಪೂರ್ಣ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲು ಉದ್ದೇಶಿಸಲಾಗಿದೆ. ಆದರೆ ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಅಥವಾ ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆ. ಮಾಹಿತಿ ನೀಡುವ ಬಗ್ಗೆ, ಸಮೀಕ್ಷೆಯಲ್ಲಿ ಭಾಗವಹಿಸುವ ಬಗ್ಗೆ ಆಯೋಗ ಒತ್ತಾಯ ಮಾಡುತ್ತಿಲ್ಲ ಎಂದು ಸ್ಪಷ್ಟೀಕರಿಸಲಾಗಿದೆ ಎಂದು ಆಯೋಗದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಒತ್ತಾಯ ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ. ನಾವು ಸಹ ಅದನ್ನೇ ಹೇಳಿದ್ದೇವೆ. ಸಮೀಕ್ಷೆಯಲ್ಲಿ ಬರೆಸಬಹುದು ಅಥವಾ ಬಿಡಬಹುದು. ನಾವು ಯಾರನ್ನೂ ಒತ್ತಾಯ ಮಾಡುವುದಿಲ್ಲ.
- ಶಿವರಾಜ್ ತಂಗಡಗಿ, ಸಚಿವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ