ಸಾರಾಂಶ
ಕೇಂದ್ರ ಸರ್ಕಾರ ಜನೌಷಧಿ ಕೇಂದ್ರಗಳ ಮೂಲಕ ಯಾವ ರೀತಿ ರಿಯಾಯತಿ ದರದಲ್ಲಿ ಔಷಧ ನೀಡುತ್ತಿದೆಯೋ ಅದೇ ರೀತಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಕೀಟನಾಶಕ ಕೇಂದ್ರ (ಫೆಸ್ಟಿಸೈಡ್ ಸೆಂಟರ್) ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದರು.
ಬೆಂಗಳೂರು : ಕೇಂದ್ರ ಸರ್ಕಾರ ಜನೌಷಧಿ ಕೇಂದ್ರಗಳ ಮೂಲಕ ಯಾವ ರೀತಿ ರಿಯಾಯತಿ ದರದಲ್ಲಿ ಔಷಧ ನೀಡುತ್ತಿದೆಯೋ ಅದೇ ರೀತಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಕೀಟನಾಶಕ ಕೇಂದ್ರ (ಫೆಸ್ಟಿಸೈಡ್ ಸೆಂಟರ್) ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜನೌಷಧಿ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಔಷಧಿಗಳನ್ನು ನೀಡುತ್ತಿದೆ. ಅದೇ ರೀತಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕೀಟನಾಶಕ ಕೇಂದ್ರಗಳನ್ನು ಸ್ಥಾಪಿಸಿ ರೈತರಿಗೆ ಕಡಿಮೆ ದರದಲ್ಲಿ ಉತ್ಪನ್ನಗಳನ್ನು ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ವಿವರಿಸಿದರು. ಮಂಡ್ಯ, ತುಮಕೂರು, ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತೆಂಗು ಬೆಳೆಯುವ ರೈತರು ಸಂಕಷ್ಟದಲ್ಲಿದ್ದಾರೆ. ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿ ಸಮಸ್ಯೆಯ ತೀವ್ರತೆ ತಿಳಿದುಕೊಳ್ಳಲಾಗಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಶುಕ್ರವಾರ ಸಂಜೆ ನಗರಕ್ಕೆ ಆಗಮಿಸುತ್ತಿದ್ದು ತೆಂಗು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಕಪ್ಪು ತಲೆ ಹುಳು ಬಾಧೆ ಚರ್ಚೆ
ಕಪ್ಪು ತಲೆ ಹುಳು(ಬ್ಲ್ಯಾಕ್ ಹೆಡ್ಡೆಡ್ ಕ್ಯಾಟ್‌ಪಿಲ್ಲರ್)ವಿನ ಬಾಧೆಯಿಂದ ರಾಜ್ಯದ ಬಹಳಷ್ಟು ಜಿಲ್ಲೆಗಳ ರೈತರು ಸಂಕಷ್ಟಕ್ಕೆ ಒಳಗಾಗಿದ್ದು ಈ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದೆ. ‘ರೋಗಬಾಧೆಯಿಂದಾಗಿ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಮಾಣದಲ್ಲಿ ತೆಂಗಿಗೆ ಹಾನಿಯಾಗಿದೆ ಎಂದು ಸಮೀಕ್ಷೆ ನಡೆಸಲಾಗುತ್ತಿದೆ. ಎರಡು ವಾರದಲ್ಲಿ ಸಮೀಕ್ಷೆ ವರದಿ ಬರಲಿದೆ’ ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದ್ದಾರೆ. ವರದಿ ಬಂದ ಬಳಿಕ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ನಿರ್ಧರಿಸುವ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು ಎಂದು ಮೂಲಗಳು ತಿಳಿಸಿವೆ.