ಸಾರಾಂಶ
ಪ್ರಕರಣಗಳನ್ನು ಮತ್ತೊಂದು ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಗಳ ಪ್ರಧಾನ ನ್ಯಾಯಾಧೀಶರು ವಜಾಗೊಳಿಸಿದ್ದಾರೆ.
ಬೆಂಗಳೂರು : ತಮ್ಮ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಅತ್ಯಾಚಾರ ಆರೋಪ ಸಂಬಂಧಿತ ಎರಡು ಪ್ರತ್ಯೇಕ ಪ್ರಕರಣಗಳನ್ನು ಮತ್ತೊಂದು ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಗಳ ಪ್ರಧಾನ ನ್ಯಾಯಾಧೀಶರು ವಜಾಗೊಳಿಸಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಈ ಅರ್ಜಿ ಕುರಿತು ವಾದ-ಪ್ರತಿವಾದ ಆಲಿಸಿದ ಪ್ರಧಾನ ನ್ಯಾಯಾಧೀಶ ಮುರಳೀಧರ ಪೈ ಅವರು ಶನಿವಾರ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದರು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಈಗಾಗಲೇ ತನ್ನ ವಿರುದ್ಧದ ಒಂದು ಪ್ರಕರಣದಲ್ಲಿ ನೀಡಿರುವ ತೀರ್ಪಿನಲ್ಲಿ ಪೂರ್ವಾಗ್ರಹ ಭಾವನೆ ಹೊಂದಿರುವ ಅಂಶಗಳಿವೆ. ಇದು ಅವರ ಅನ್ಯಾಯಾದ ಧೋರಣೆಯನ್ನು ತೋರಿಸುತ್ತದೆ. ಹೀಗಾಗಿ ತನ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರದ ಎರಡು ಪ್ರತ್ಯೇಕ ಪ್ರಕರಣಗಳನ್ನು ನಗರದ ಮತ್ತೊಂದು ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಪ್ರಜ್ವಲ್ ಅರ್ಜಿಯಲ್ಲಿ ಮನವಿ ಮಾಡಿದ್ದರು. ಇದೀಗ ಅರ್ಜಿ ವಜಾಗೊಂಡಿರುವುದರಿಂದ ಪ್ರಜ್ವಲ್‌ಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಈ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ.