ಬೆಂಗಳೂರು ನಗರ ಜಿಲ್ಲಾದ್ಯಂತ 24ರಿಂದಲೇ ನಿಷೇಧಾಜ್ಞೆ ಜಾರಿ

| Published : Apr 15 2024, 08:14 AM IST

Bengaluru city
ಬೆಂಗಳೂರು ನಗರ ಜಿಲ್ಲಾದ್ಯಂತ 24ರಿಂದಲೇ ನಿಷೇಧಾಜ್ಞೆ ಜಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಏ. 24 ರ ಸಂಜೆ 6 ಗಂಟೆಯಿಂದ ಏ. 26ರ ಮಧ್ಯರಾತ್ರಿ 12 ಗಂಟೆವರೆಗೆ ಹಾಗೂ ಫಲಿತಾಂಶದ ದಿನವಾದ ಜೂ.4ರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ನಿಷೇಧಾಜ್ಞೆ ಹೊರಡಿಸಿ ಆದೇಶಿಸಿದ್ದಾರೆ.

ಬೆಂಗಳೂರು :  ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಏ. 24 ರ ಸಂಜೆ 6 ಗಂಟೆಯಿಂದ ಏ. 26ರ ಮಧ್ಯರಾತ್ರಿ 12 ಗಂಟೆವರೆಗೆ ಹಾಗೂ ಫಲಿತಾಂಶದ ದಿನವಾದ ಜೂ.4ರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ನಿಷೇಧಾಜ್ಞೆ ಹೊರಡಿಸಿ ಆದೇಶಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮರವಣಿಗೆ ಹಾಗೂ ಸಭೆ, ಸಮಾರಂಭ ನಡೆಸುವುದು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಅಥವಾ ಅವರ ಬೆಂಬಲಿಗರು ಸೇರಿ ಐದು ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಭರ್ಜಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಟಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯ ಉಂಟು ಮಾಡುವ ಮಾರಕಾಸ್ತ್ರ ಬಳಸುವಂತಿಲ್ಲ. ಜೊತೆಗೆ ಮತಗಟ್ಟೆಗಳ 100 ಮೀಟರ್ ಒಳಗೆ ಚುನಾವಣಾ ಪ್ರಚಾರ ನಿಷೇಧಿಸಿದೆ.

ಜೊತೆಗೆ ಈ ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿ, ಸೈಬರ್ ಕೆಫೆ, ಬುಕ್ ಸ್ಟಾಲ್‌ಗಳನ್ನು ಅಂದು ನಿರ್ಬಂಧಿಸಲಾಗಿದೆ. ಇನ್ನು, ಕೋವಿಡ್ -19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿಯವರಿಂದ ಅನುಮತಿ ಪಡೆದ ಅಧಿಕಾರಿಗಳು / ಸಿಬ್ಬಂದಿ ಹೊರತುಪಡಿಸಿ ಮತಗಟ್ಟೆ ಸುತ್ತ 100 ಮೀ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡ್ ಲೆಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ ಉಪಕರಣ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಅಥವಾ ಇನ್ನುಳಿದ ಯಾವುದೇ ವಸ್ತುವನ್ನು ಹಾಗೂ ಧ್ವನಿವರ್ಧಕ ಬಳಸುವಂತಿಲ್ಲ. ಯಾವುದೇ ವ್ಯಕ್ತಿಯ ಜಾತಿ-ಧರ್ಮ, ಕೋಮು ಪಂಥಗಳಿಗೆ ಅಥವಾ ಸಾರ್ವಜನಿಕ ನೈತಿಕತೆಗೆ ಅಡ್ಡಿ ಉಂಟು ಮಾಡುವ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.