ಸಾರಾಂಶ
ರಾಜ್ಯದಲ್ಲಿ ಮಳೆ ಮತ್ತೆ ಚುರುಕುಗೊಂಡಿದ್ದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು : ರಾಜ್ಯದಲ್ಲಿ ಮಳೆ ಮತ್ತೆ ಚುರುಕುಗೊಂಡಿದ್ದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶನಿವಾರದಿಂದ ಮಳೆ ಚುರುಕುಕೊಂಡಿದ್ದು, ಉತ್ತಮ ಮಳೆಯಾಗುತ್ತಿದೆ. ಜುಲೈ17ರವರೆಗೆ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಅವಧಿಯಲ್ಲಿ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಉತ್ತಮ ಮಳೆ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.
ಜುಲೈ 17ರಿಂದ 20ರ ವರೆಗೆ ಕರಾವಳಿ, ಒಳನಾಡು ಮಲೆನಾಡು ಭಾಗದಲ್ಲಿ ಮಳೆ ಇನ್ನಷ್ಟು ಹೆಚ್ಚಾಗಲಿರುವುದರಿಂದ ಕರಾವಳಿಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹಾಗೂ ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಕೋಲಾರ, ಮೈಸೂರು,ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಹವಾಮಾನ ವರದಿ ಪ್ರಕಾರ ಕಳೆದ 24 ಗಂಟೆಯಲ್ಲಿ ಮಂಕಿ, ಸಿದ್ದಾಪುರ, ಗೋಕರ್ಣ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು 7 ಸೆಂ.ಮೀ. ಮಳೆಯಾಗಿದೆ. ಉಳಿದಂತೆ ಕೋಟ 6, ಕದ್ರಾ, ಕುಂದಾಪುರ, ಆಗುಂಬೆಯಲ್ಲಿ ತಲಾ 5, ಮಾಣಿ, ಕ್ಯಾಸಲ್ ರಾಕ್, ಕುಮಟಾದಲ್ಲಿ ತಲಾ 4, ಕಾರವಾರ, ಶೃಂಗೇರಿ, ಹೊನ್ನಾವರ, ಪುತ್ತೂರು, ಮುಲ್ಕಿ, ಮುನಿರಾಬಾದ್ ಸೇರಿದಂತೆ ಮೊದಲಾದ ಕಡೆ 3 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.