ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ನಿಗದಿಪಡಿಸಿರುವ ₹11 ಸಾವಿರ ಕೋಟಿ ಆದಾಯ ಸಂಗ್ರಹದ ಗುರಿ ಸಾಧಿಸಲು ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯೂ ಗುರಿ ಆಧಾರಿತವಾಗಿ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲಾ ಜಿಯಾಲಜಿಸ್ಟ್‌ಗಳಿಗೂ ಪ್ರತ್ಯೇಕವಾಗಿ ಕಾರ್ಯಭಾರ ಹಾಗೂ ಆದಾಯ ಸಂಗ್ರಹಣೆಯ ಗುರಿ ನಿಗದಿಪಡಿಸಲಾಗುವುದು ಎಂದು ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶುಕ್ರವಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ಜಿಲ್ಲೆಯ ಭೂವಿಜ್ಞಾನಿಗಳಿಗೆ ಪ್ರತ್ಯೇಕ ಕಾರ್ಯಗುರಿ ನಿಗದಿಪಡಿಸಲಾಗುವುದು ಎಂದರು.

ಸಿಎಂ ಸ್ಪಷ್ಟ ಸೂಚನೆ:

ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲ ಗಣಿಗಳಿಗೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ, ಕಾರ್ಮಿಕರ ಸುರಕ್ಷತೆ, ಕಡ್ಡಾಯ ಸುರಕ್ಷತಾ ಮಾನದಂಡಗಳ ಅನುಷ್ಠಾನ ಹಾಗೂ ಗಣಿಗಾರಿಕೆ ಕಾರ್ಯಾಚರಣೆಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಲ್ಲು ಗಣಿಯಲ್ಲಿ ಇತ್ತೀಚೆಗೆ ಸಂಭವಿಸಿದ ದುರ್ಘಟನೆಯಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಪ್ರತಿಯೊಂದು ಗಣಿಯಲ್ಲೂ ಸುರಕ್ಷತಾ ಕ್ರಮಗಳನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು ಎಂದು ಅವರು ಸ್ಪಷ್ಟ ಸೂಚನೆ ನೀಡಿದರು.


₹2,000 ಕೋಟಿ ಆದಾಯ ಸಂಗ್ರಹಿಸುವ ಗುರಿ

ಈ ವರ್ಷ ಒನ್ ಟೈಮ್ ಸೆಟಲ್‌ಮೆಂಟ್ ಯೋಜನೆಯ ಮೂಲಕ ₹2,000 ಕೋಟಿ ಆದಾಯ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ಮುಂದಿನ ಆರು ತಿಂಗಳಲ್ಲಿ ಈ ಗುರಿ ಸಾಧಿಸಲು ಎಲ್ಲ ಅಧಿಕಾರಿಗಳು ಹೆಚ್ಚಿನ ಕಾರ್ಯತತ್ಪರತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಇಲಾಖೆಯ ನಿರ್ದೇಶಕರಾದ ಎಸ್. ರಂಗಪ್ಪ, ಇಲಾಖೆಯ ಹಿರಿಯ ಅಧಿಕಾರಿಗಳು, ಹಿರಿಯ ಭೂವಿಜ್ಞಾನಿಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳ ಗಣಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.