ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ : ಡಿ.ಕೆ.ಶಿವಕುಮಾರ್ ಬೆನ್ನಲ್ಲೇ ಇಂದು ಸಿದ್ದರಾಮಯ್ಯ ಕೂಡ ದೆಹಲಿಗೆ

| Published : Nov 28 2024, 07:30 AM IST

Siddaramaiah

ಸಾರಾಂಶ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ಬುಧವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಗುರುವಾರ ದೆಹಲಿಗೆ ತೆರಳಲಿದ್ದಾರೆ.

 ನವದೆಹಲಿ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ ಬುಧವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಗುರುವಾರ ದೆಹಲಿಗೆ ತೆರಳಲಿದ್ದಾರೆ.

ಸಿದ್ದರಾಮಯ್ಯ ಅವರು ಶುಕ್ರವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿ ಸಲು ದೆಹಲಿಗೆ ತೆರಳುತ್ತಿದ್ದಾರೆ. ಈ ವೇಳೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್ ಅವರನ್ನು ಡಿ.ಕೆ.ಶಿವಕುಮಾರ್ ಅವರ ಜೊತೆಗೂಡಿ ಭೇಟಿಯಾಗಿ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸಲಿದ್ದಾರೆಯೇ ಎಂಬುದು ಕುತೂಹಲ ಮೂಡಿಸಿದೆ. ಅಲ್ಲದೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಮಾಡುವ ಬಗ್ಗೆಯೂ ರಾಜಕೀಯ ವಲಯದಲ್ಲಿ ಗುಲ್ಲೆದ್ದಿದ್ದು, ಈ ಬಗ್ಗೆ ಚರ್ಚೆ ನಡೆಯುವುದೇ ಅಥವಾ ಇಲ್ಲವೇ ಎಂಬುದು ಖಚಿತಪಟ್ಟಿಲ್ಲ.

ಬುಧವಾರ ದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ವೇಣುಗೋಪಾಲ್ ಅವರನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು. ಅಲ್ಲದೆ, ಪ್ರಿಯಾಂಕಾ ಗಾಂಧಿಯ ವರನ್ನೂ ಭೇಟಿಯಾದರು. ಶುಕ್ರವಾರ ಮಧ್ಯಾಹ್ನ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಸಿದ್ದರಾಮಯ್ಯ ಸೇರಿ ವಿವಿಧ ರಾಜ್ಯಗಳ ಕಾಂಗ್ರೆಸ್ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಇದೇ ವೇಳೆ, ಸಿದ್ದರಾಮಯ್ಯ ಕೆಲ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.