ಸಾರಾಂಶ
ಅಪಾಯಕಾರಿಯಾಗಿ ದ್ವಿಚಕ್ರ ವಾಹನ ವ್ಹೀಲಿಂಗ್, ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಮಾಡುವ ಸವಾರರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
ಬೆಂಗಳೂರು : ಅಪಾಯಕಾರಿಯಾಗಿ ದ್ವಿಚಕ್ರ ವಾಹನ ವ್ಹೀಲಿಂಗ್, ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಮಾಡುವ ಸವಾರರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹೊಸವರ್ಷದ ಸಂದರ್ಭದಲ್ಲಿ ಯಾವುದೇ ಅವಘಡಗಳು ಹಾಗೂ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸ್ ಇಲಾಖೆ ಸಜ್ಜಾಗಿದೆ. ಯುವಕರು ರಸ್ತೆಗಳಲ್ಲಿ ದ್ವಿಚಕ್ರ ವಾಹನ ವ್ಹೀಲಿಂಗ್, ಡ್ರಂಕ್ ಆ್ಯಂಡ್ ಡ್ರೈವಿಂಗ್, ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದು, ಪೋಷಕರು ಹದಿಹರೆಯದ ಮಕ್ಕಳಿಗೆ ಬೈಕ್ ನೀಡಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.
56 ಮಂದಿ ಬಂಧನ:
ಕಳೆದ ಹತ್ತು ದಿನಗಳಲ್ಲಿ ನಗರದ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ವ್ಹೀಲಿಂಗ್ ಮಾಡುವ 56 ಮಂದಿ ಸವಾರರನ್ನು ಬಂಧಿಸಿ, 75 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. 45 ಸವಾರರ ನೋಂದಣಿ ಪ್ರಮಾಣ ಪತ್ರ(ಆರ್‌ಸಿ) ಮತ್ತು 23 ಸವಾರರು ಚಾಲನಾ ಪರವಾನಗಿ(ಡಿಎಲ್) ಜಪ್ತಿ ಮಾಡಿ, ಅಮಾನತುಗೊಳಿಸಲು ಸಾರಿಗೆ ಇಲಾಖೆಗೆ ಕಳುಹಿಸಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿದ 10 ಮಂದಿ ಅಪ್ರಾಪ್ತರ ಪೋಷಕರ ವಿರುದ್ಧ ಜೆ.ಜೆ.ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.