ಬೆಂಗಳೂರು ಸೇರಿದಂತೆ ರಾಜ್ಯದ ನಗರ ಪ್ರದೇಶಗಳ ಲಕ್ಷಾಂತರ ಜನಸಾಮಾನ್ಯರಿಗೆ, ಉದ್ಯೋಗಿಗಳಿಗೆ ಮತ್ತು ಬೈಕ್ ಟ್ಯಾಕ್ಸಿ ಚಾಲಕರಿಗೆ ಸುಪ್ರೀಂ ಕೋರ್ಟ್‌ನಿಂದ ಭರ್ಜರಿ ರಿಲೀಫ್ ಸಿಕ್ಕಿದೆ. ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ನವದೆಹಲಿ : ಬೆಂಗಳೂರು ಸೇರಿದಂತೆ ರಾಜ್ಯದ ನಗರ ಪ್ರದೇಶಗಳ ಲಕ್ಷಾಂತರ ಜನಸಾಮಾನ್ಯರಿಗೆ, ಉದ್ಯೋಗಿಗಳಿಗೆ ಮತ್ತು ಬೈಕ್ ಟ್ಯಾಕ್ಸಿ ಚಾಲಕರಿಗೆ ಸುಪ್ರೀಂ ಕೋರ್ಟ್‌ನಿಂದ ಭರ್ಜರಿ ರಿಲೀಫ್ ಸಿಕ್ಕಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ (ರ್‍ಯಾಪಿಡೋ, ಓಲಾ, ಉಬರ್) ಸೇವೆಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

2025ರ ಜೂನ್‌ 16ರಂದು ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಓಲಾ, ಉಬರ್ ಮತ್ತು ರ‍್ಯಾಪಿಡೋ ಸೇರಿದಂತೆ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿ, ಆದೇಶ ಹೊರಡಿಸಿತ್ತು. 2026ರ ಜನವರಿ 23ರಂದು ಈ ಕುರಿತ ಪ್ರಕರಣದ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್‌, ನಿಷೇಧ ತೆರವುಗೊಳಿಸಿ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು.

ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರಿದ್ದ ದ್ವಿಸದಸ್ಯ ಪೀಠದ ಮುಂದೆ ಶುಕ್ರವಾರ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಯಿತು. ಬೈಕ್ ಟ್ಯಾಕ್ಸಿಗಳಿಂದ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆಯಿದೆ, ಸೂಕ್ತ ವಿಮಾ ಸೌಲಭ್ಯಗಳಿಲ್ಲ ಎಂಬ ರಾಜ್ಯ ಸರ್ಕಾರದ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ, ತಮ್ಮ ಕಚೇರಿಯಲ್ಲೇ ನಡೆದ ನೈಜ ಪ್ರಸಂಗವೊಂದನ್ನು ಹಂಚಿಕೊಂಡು, ಬೈಕ್ ಟ್ಯಾಕ್ಸಿಗಳು ಸಾಮಾನ್ಯ ಜನರಿಗೆ ಎಷ್ಟು ಅನಿವಾರ್ಯ ಎಂಬುದನ್ನು ಒತ್ತಿ ಹೇಳಿದರು.

ನನ್ನ ಕಚೇರಿಯಲ್ಲಿ ಕೆಲಸ ಮಾಡುವ ಯುವತಿಯರ ಬಳಿ, ‘ನೀವು ನಿತ್ಯ ಆಫೀಸ್‌ಗೆ ಹೇಗೆ ಬರುತ್ತೀರಿ?’ ಎಂದು ಕೇಳಿದೆ. ಅದಕ್ಕವರು, ‘ಕ್ಯಾಬ್ ಬುಕ್ ಮಾಡುವಷ್ಟು ಹಣ ನಮ್ಮಲ್ಲಿಲ್ಲ, ಹಾಗಾಗಿ ಬೈಕ್ ಟ್ಯಾಕ್ಸಿಯಲ್ಲೇ ಬರುತ್ತೇವೆ’ ಎಂದು ಹೇಳಿದರು. ‘ಹಾಗಾದರೆ ಆಟೋದಲ್ಲಿ ಏಕೆ ಬರಬಾರದು?’ ಎಂದು ಮರುಪ್ರಶ್ನಿಸಿದೆ. ಅದಕ್ಕವರು, ‘ಸರ್, ಬೈಕ್ ಟ್ಯಾಕ್ಸಿಗೆ ಹೋಲಿಸಿದರೆ ಆಟೋ ದರ ಐದು ಪಟ್ಟು ಹೆಚ್ಚಿರುತ್ತದೆ!’ ಎಂದು ಉತ್ತರಿಸಿದರು ಎಂದರು.

ಬೆಂಗಳೂರಿನಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಾಗುತ್ತದೆ ಎಂಬ ಸರ್ಕಾರದ ವಾದಕ್ಕೆ ಪ್ರತಿಕ್ರಿಯಿಸಿ, ಕಾರುಗಳಿಗೆ ಹೋಲಿಸಿದರೆ ದ್ವಿಚಕ್ರ ವಾಹನಗಳು ರಸ್ತೆಯಲ್ಲಿ ಕಡಿಮೆ ಜಾಗ ಆಕ್ರಮಿಸುತ್ತವೆ, ಇದರಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ, ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ಕೇಂದ್ರ ಸರ್ಕಾರದ ಅಧಿಸೂಚನೆಗಳ ಪ್ರಕಾರವೂ ಮೋಟಾರ್ ಸೈಕಲ್‌ಗಳನ್ನು ಟ್ಯಾಕ್ಸಿಯಾಗಿ ಬಳಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ತಿಳಿಸಿದರು. ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳ ಪರ ವಾದ ಮಂಡಿಸಿದ ವಕೀಲರು, ನಿಷೇಧಕ್ಕೂ ಮುನ್ನ ರಾಜ್ಯದಲ್ಲಿ ಪ್ರತಿದಿನ ಸುಮಾರು 4.5 ಲಕ್ಷಕ್ಕೂ ಹೆಚ್ಚು ಜನರು ಬೈಕ್ ಟ್ಯಾಕ್ಸಿಗಳ ಅಗ್ಗದ ಸೇವೆಯನ್ನು ಬಳಸಿಕೊಳ್ಳುತ್ತಿದ್ದರು ಎಂದು ಹೇಳಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ವಿಧಿಸಿದ್ದ ನಿಷೇಧ ತೆರವುಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿತು.

ಪ್ರಕರಣದ ಹಿನ್ನೆಲೆ?:

2025ರ ಜೂನ್‌ 16ರಂದು ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಓಲಾ, ಉಬರ್ ಮತ್ತು ರ‍್ಯಾಪಿಡೋ ಸೇರಿದಂತೆ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿ, ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅಗ್ರಿಗೇಟರ್ ಸಂಸ್ಥೆಗಳಾದ ಓಲಾ, ಉಬರ್, ರಾಪಿಡೋ, ಮೋಟಾರ್‌ ಸೈಕಲ್ ಮಾಲೀಕರು ಹಾಗೂ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘದವರು ಹೈಕೋರ್ಟ್‌ ಮೊರೆ ಹೋಗಿದ್ದರು.

2026ರ ಜನವರಿ 23ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರನ್ನೊಳಗೊಂಡ ಹೈಕೋರ್ಟ್‌ನ ವಿಭಾಗೀಯ ಪೀಠ, ನಿಷೇಧವನ್ನು ತೆರವುಗೊಳಿಸಿ, ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು ಮತ್ತು ಕ್ಯಾರೇಜ್ ಪರ್ಮಿಟ್ ನೀಡಲು ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ರಾಜ್ಯ ಸರ್ಕಾರ ವಿಧಿಸುವ ನಿಯಂತ್ರಕ ಅವಶ್ಯಕತೆಗಳಿಗೆ ಒಳಪಟ್ಟು, ಮೋಟಾರ್‌ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಬಹುದು ಮತ್ತು ಕಾಂಟ್ರಾಕ್ಟ್ ಕ್ಯಾರೇಜ್‌ಗಳಾಗಿ ನಿರ್ವಹಿಸಬಹುದು ಎಂದು ಸ್ಪಷ್ಟಪಡಿಸಿತ್ತು.

ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಬೈಕ್ ಟ್ಯಾಕ್ಸಿ ಸೇವೆಗಳನ್ನು ಬಳಸುವ ಪ್ರಯಾಣಿಕರ ಸುರಕ್ಷತೆ, ವಿಮಾ ರಕ್ಷಣೆ ಮತ್ತು ಪ್ರಯಾಣಿಕರ ಸುರಕ್ಷತಾ ಕ್ರಮಗಳ ಕೊರತೆ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಇತರ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳು ಸಹ ಹೈಕೋರ್ಟ್ ನಿರ್ಧಾರವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದವು. ಸಮಾನ ನಿಯಂತ್ರಕ ಬಾಧ್ಯತೆಗಳಿಲ್ಲದೆ ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ನೀಡುವುದರಿಂದ ಸಾಂಪ್ರದಾಯಿಕ ಸಾರಿಗೆ ನಿರ್ವಾಹಕರ (ಆಟೋ ಮತ್ತು ಟ್ಯಾಕ್ಸಿ ಚಾಲಕರ) ಜೀವನೋಪಾಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ವಾದಿಸಿದ್ದವು. ಆದರೆ, ಸುಪ್ರೀಂಕೋರ್ಟ್‌, ಈ ಎಲ್ಲಾ ಮೇಲ್ಮನವಿಗಳನ್ನು ವಜಾಗೊಳಿಸಿ, ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.