ಸಾರಾಂಶ
ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಹೈಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿದೆ.
ನವದೆಹಲಿ : ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಹೈಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿದೆ.
2023ರ ಮಾ.24ರಂದು ರೋಹಿಣಿ ಹೂಡಿದ್ದ ಖಾಸಗಿ ಮೊಕದ್ದಮೆಯನ್ನು ಪರಿಗಣಿಸಿದ್ದ ಬೆಂಗಳೂರಿನ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲು ಆದೇಶಿಸಿತ್ತು. ಬಳಿಕ, ಇದನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ರೂಪಾ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ನ್ಯಾ.ಅಭಯ್ ಓಕಾ ನೇತೃತ್ವದ ಪೀಠದ ಮುಂದೆ ಗುರುವಾರ ವಿಚಾರಣೆ ನಡೆಯಿತು.
ರೂಪಾ ಪರ ವಕೀಲರು ವಾದ ಮಂಡಿಸಿ, ಮಧ್ಯಸ್ಥಿಕೆ ಮೂಲಕ ಇತ್ಯರ್ಥಕ್ಕೆ ಒಲವು ವ್ಯಕ್ತಪಡಿಸಿದರು. ಸಿಂಧೂರಿ ಪರ ವಕೀಲರು ವಾದ ಮಂಡಿಸಿ, ಬೇಷರತ್ ಕ್ಷಮೆಯಾಚಿಸಿದರೆ ಮಾನನಷ್ಟ ಮೊಕದ್ದಮೆ ಅರ್ಜಿ ವಾಪಸ್ ಪಡೆಯುವುದಾಗಿ ತಿಳಿಸಿದರು. ಆದರೆ, ಕ್ಷಮೆ ಕೋರಲು ರೂಪಾ ಅವರು ಒಪ್ಪಲಿಲ್ಲ. ಅರ್ಜಿ ವಾಪಸ್ ಪಡೆದು ಹೈಕೋರ್ಟ್‌ನಲ್ಲಿ ಇತ್ಯರ್ಥ ಮಾಡಿಕೊಳ್ಳುವುದಾಗಿ ತಿಳಿಸಿದರು.
ಈ ಮಧ್ಯೆ, ಸುಪ್ರೀಂಕೋರ್ಟ್‌ನ ಹಿರಿಯ ವಕೀಲರು ಅಥವಾ ನಿವೃತ್ತ ನ್ಯಾಯಾಧೀಶರ ಸಮ್ಮುಖದಲ್ಲಿ ರಾಜೀ ಸಂಧಾನಕ್ಕೆ ನ್ಯಾಯಪೀಠ ಸಲಹೆ ನೀಡಿತಾದರೂ ಇದಕ್ಕೆ ಸಿಂಧೂರಿ ಪರ ವಕೀಲರು ಒಪ್ಪಲಿಲ್ಲ. ಕೋರ್ಟ್ ಆದೇಶದ ಬಳಿಕವೂ ರೂಪಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಮಾಡಿದ ಆರೋಪಗಳನ್ನು ಡಿಲೀಟ್ ಮಾಡಿಲ್ಲ ಎಂದು ಆಕ್ಷೇಪಿಸಿದರು.
ಅಂತಿಮವಾಗಿ, ಇಬ್ಬರು ಹಿರಿಯ ಅಧಿಕಾರಿಗಳು ಈ ರೀತಿ ವರ್ತಿಸುವುದು ತರವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ಹೈಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿತು.