ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ 5, 8, 9ನೇ ಕ್ಲಾಸ್‌ಗೆ ಬೋರ್ಡ್ ಪರೀಕ್ಷೆ ಇಲ್ಲ : ಸಚಿವ ಮಧು ಬಂಗಾರಪ್ಪ

| Published : Oct 19 2024, 11:52 AM IST

Madhu Bangarappa

ಸಾರಾಂಶ

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು : ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಮಂಡಳಿ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ 5, 8 ಮತ್ತು 9ನೇ ತರಗತಿಗೆ ಶಾಲಾ ಹಂತದಲ್ಲೇ ಸಂಕಲನಾತ್ಮಕ ಮೌಲ್ಯ ಮಾಪನ-2 (ಎಸ್‌ಎ-2) ಮತ್ತು 11ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಾಲ್ಕೂ ತರಗತಿಗಳಿಗೆ ಮಂಡಳಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಕೆಲ ಖಾಸಗಿ ಶಾಲಾ ಸಂಘಟನೆಗಳು ಸುಪ್ರಿಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿವೆ. ಈ ಪ್ರಕರಣದ ವಿಚಾರಣೆ ವೇಳೆ ಸರ್ವೋಚ್ಚ ನ್ಯಾಯಾಲಯವು ಮಂಡಳಿ ಪರೀಕ್ಷೆ ನಡೆಸದಂತೆ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷದ ಫಲಿತಾಂಶವನ್ನು ತಡೆಹಿಡಿದಿದ್ದು, ನಡ ವಳಿಕೆ ಕುರಿತು ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದ್ದೇವೆ.

ಈ ಸಂಬಂಧ ಅಫಿಡವಿಟ್ ಸಲ್ಲಿಸಲಾಗಿದೆ. ಈ ವರ್ಷವೂ ಮಂಡಳಿ ಪರೀಕ್ಷೆ ನಡೆಸುವುದಿಲ್ಲ ಎಂದರು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ನಡೆಯುವ ಮಂಡಳಿ ಪರೀಕ್ಷೆಯಲ್ಲಿ ಅಕ್ರಮಗಳಿಗೆ ಕಡಿವಾಣ ಹಾಕಲು ಪರೀಕ್ಷಾ ಕೇಂದ್ರಗಳಿಗೆ ಸಂಪೂರ್ಣ ಸಿಸಿ ಕ್ಯಾಮರಾ, ವೆಬ್ ಕಾಸ್ಟಿಂಗ್‌ನಂತಹ ಸುಧಾರಣಾ ಕ್ರಮಗಳನ್ನು ಪರಿಚಯಿಸಲಾಗಿದೆ. ಮಂಡಳಿ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಭಯ, ಆತಂಕ ಹೋಗಲಾಡಿ ಸಲು 5, 8, 9 ಮತ್ತು 11ನೇ ತರಗತಿಯಲ್ಲೂ ಮಂಡಳಿಯಿಂದಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.

ಆದರೆ, ಇದನ್ನು ಕೆಲ ಖಾಸಗಿ ಶಾಲಾ ಸಂಘಟನೆಗಳು ವಿರೋಧಿಸಿ ಕಾನೂನು ಹೋರಾಟ ನಡೆಸಿವೆ. ಮಂಡಳಿ ಪರೀಕ್ಷೆರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪುನ್ನು ದ್ವಿಸದಸ್ಯ ಪೀಠ ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಖಾಸಗಿ ಶಾಲಾ ಸಂಘಟನೆಗಳು ಸುಪ್ರೀಂ ಕೋರ್ಟ್‌ಗೆ ಹೋಗಿದ್ದಾರೆ. ಪ್ರಕರಣದಲ್ಲಿ ಸುಪ್ರಿಂ ಕೋರ್ಟ್‌ನಿಂದ ಬರುವ ಅಂತಿಮ ಆದೇಶಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.