ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ತಮ್ಮನ್ನು ಕೈ ಬಿಡುವಂತೆ ಕೋರಿ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.
ಬೆಂಗಳೂರು : ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ತಮ್ಮನ್ನು ಕೈ ಬಿಡುವಂತೆ ಕೋರಿ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.
ಆರೋಪಿ ಸೂರಜ್ ರೇವಣ್ಣ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿ ಕುರಿತು ಮಂಗಳವಾರ ವಿಚಾರಣೆ ನಡೆಸಿದ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಈ ಆದೇಶ ಪ್ರಕಟಿಸಿದರು. ಹೀಗಾಗಿ ಸೂರಜ್ ರೇವಣ್ಣಗೆ ಮುಂದಿನ ಕಾನೂನು ಸಂಕಷ್ಟ ಎದುರಿಸುವುದು ಅನಿವಾರ್ಯವಾಗಿದೆ.
ಪ್ರಕರಣದ ಹಿನ್ನೆಲೆ:
ಜೆಡಿಎಸ್ ಕಾರ್ಯಕರ್ತರೊಬ್ಬರು ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಈ ಸಂಬಂಧ 2024ರ ಜೂ.22ರಂದು ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿದ್ದ ಪೊಲೀಸರು ಜೂ.23ರಂದು ಸೂರಜ್ ರೇವಣ್ಣರನ್ನು ಬಂಧಿಸಿ ಜೈಲಿಗಟ್ಟಿದ್ದರು. ಸುಮಾರು ತಿಂಗಳ ಕಾಲ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿದ್ದ ಸೂರಜ್ ರೇವಣ್ಣ ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿದ್ದರು.
ಮತ್ತೊಂದೆಡೆ ಸೂರಜ್ ರೇವಣ್ಣ ಅವರ ಆಪ್ತ ಶಿವಕುಮಾರ್ ಅವರು ಸಂತ್ರಸ್ತನ ವಿರುದ್ಧವೇ ಪ್ರತಿ ದೂರು ನೀಡಿದ್ದರು. ದೂರುದಾರ ಐದು ಕೋಟಿ ರು. ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡಿದ್ದರು. ಹಣ ನೀಡದಿದ್ದಕ್ಕೆ ಸೂರಜ್ ರೇವಣ್ಣ ಅವರ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಮಾಡಿದ್ದಾರೆ ಎಂದು ಪ್ರತಿ ದೂರಿನಲ್ಲಿ ಆರೋಪಿಸಿದ್ದರು. ಪ್ರಕರಣದ ಗಂಭೀರತೆ ಅರಿತ ರಾಜ್ಯ ಸರ್ಕಾರ ತನಿಖೆಗೆ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಎಸ್‌ಐಟಿ ಪೊಲೀಸರು
ಪ್ರಕರಣದ ತನಿಖೆ ನಡೆಸಿದ್ದ ಎಸ್‌ಐಟಿ ಪೊಲೀಸರು ಆರೋಪಿ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಕಾರಣ ನೀಡಿ 2025ರ ಡಿಸೆಂಬರ್‌ನಲ್ಲಿ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಈ ‘ಬಿ’ ರಿಪೋರ್ಟ್ ತಿರಸ್ಕರಿಸಿದ್ದ ನ್ಯಾಯಾಲಯವು, ಮರು ತನಿಖೆಗೆ ಆದೇಶಿಸಿತ್ತು. ಈ ನಡುವೆ ಸೂರಜ್ ರೇವಣ್ಣ ಈ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

