ಸಾರಾಂಶ
ಬಿಜೆಪಿಯ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ನಾನು ಯೋಗೇಶ್ವರ್ ಅವರನ್ನು ಭೇಟಿ ಮಾಡಿಲ್ಲ ಮತ್ತು ಮಾತನ್ನೂ ಆಡಿಲ್ಲ ಎಂದು ತಿಳಿಸಿದರು.
ಬೆಂಗಳೂರು : ಬಿಜೆಪಿಯ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ನಾನು ಯೋಗೇಶ್ವರ್ ಅವರನ್ನು ಭೇಟಿ ಮಾಡಿಲ್ಲ ಮತ್ತು ಮಾತನ್ನೂ ಆಡಿಲ್ಲ ಎಂದು ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಯೋಗೇಶ್ವರ್ ಅವರನ್ನು ಭೇಟಿಯಾಗಿದ್ದೆ. ಅದನ್ನು ಹೊರತುಪಡಿಸಿ ಯಾವುದೇ ಭೇಟಿ, ಚರ್ಚೆ ನಡೆದಿಲ್ಲ. ಬೇರೆ ಪಕ್ಷದವರನ್ನು ಸಂಪರ್ಕಿಸುವ ಅವಶ್ಯಕತೆ ನಮಗಿಲ್ಲ’ ಎಂದು ತಿರುಗೇಟು ನೀಡಿದರು.
ಡಿಕೆಸು ಸ್ಪರ್ಧೆಗೆ ಒತ್ತಡ ಇದೆ: ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಡಿ.ಕೆ.ಸುರೇಶ್ ಸ್ಪರ್ಧೆಗೆ ಶೇ.80ರಷ್ಟು ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಆದರೆ, ಹೈಕಮಾಂಡ್ ಯಾರನ್ನು ಕಣಕ್ಕಿಳಿಸುತ್ತದೆಯೋ ಅವರ ಪರವಾಗಿ ಎಲ್ಲರೂ ಕೆಲಸ ಮಾಡುವಂತೆ ತಿಳಿಸಿದ್ದೇನೆ. ಅಲ್ಲದೆ, ಡಿ.ಕೆ. ಸುರೇಶ್ ಸೇರಿದಂತೆ ನಾವೆಲ್ಲ ಲೋಕಸಭಾ ಚುನಾವಣೆ ಸೋಲಿನ ಅಘಾತದಿಂದ ಹೊರಬಂದಿಲ್ಲ. ಹಾಗೆಂದು ನಾವು ಜನ ಸೇವೆಯನ್ನು ಬಿಡುವುದಿಲ್ಲ ಎಂದು ಹೇಳಿದರು.
ಉಪಚುನಾವಣೆ ನಡೆಯುವ ಎಲ್ಲ ಮೂರು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಈಗಾಗಲೇ ಸಚಿವರುಗಳೊಂದಿಗೆ ಚರ್ಚೆ ಮಾಡಿ ಅಭಿಪ್ರಾಯ ಪಡೆದಿದ್ದೇವೆ. ಪಕ್ಷದ ಅಭ್ಯರ್ಥಿಗಳ ಕುರಿತಂತೆ ತೀರ್ಮಾನ ಆಗಿದೆ. ಆ ಬಗ್ಗೆ ದೆಹಲಿ ನಾಯಕರಿಗೆ ಪ್ರಸ್ತಾವನೆ ಸಲ್ಲಿಸುತ್ತೇವೆ. ಅವರು ಅಂತಿಮವಾಗಿ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.
ಜೆಡಿಎಸ್‌ಗಿಂತ ಎಚ್‌ಡಿಕೆ ದುರ್ಬಲ: ಡಿಕೆಶಿ ವ್ಯಂಗ್ಯ
ಚನ್ನಪಟ್ಟಣದಲ್ಲಿ ಜೆಡಿಎಸ್ ಪಕ್ಷ ದುರ್ಬಲವಾಗಿಲ್ಲ. ಆದರೆ, ಪಕ್ಷದ ನಾಯಕ ಕುಮಾರಸ್ವಾಮಿ ದುರ್ಬಲರಾಗಿದ್ದು, ಬಿಜೆಪಿಯವರ ಕೈ ಕಾಲು ಹಿಡಿದು ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುವಂತೆ ಕೇಳಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಚನ್ನಪಟ್ಟಣದಲ್ಲಿ ಜೆಡಿಎಸ್ ದುರ್ಬಲ ಎಂದು ನಾನು ಭಾವಿಸುವುದಿಲ್ಲ. ಹಾಗೆ ಭಾವಿಸಿದರೆ ನನ್ನಂತಹ ಮೂರ್ಖ ಮತ್ಯಾರೂ ಇಲ್ಲ. ಆದರೆ, ಆ ಪಕ್ಷದ ನಾಯಕ ದುರ್ಬಲರಾಗಿದ್ದಾರೆ. ಕೇಂದ್ರ ಸಚಿವರಾಗಿ ಬಿಜೆಪಿಯವರ ಕೈ ಕಾಲು ಹಿಡಿದು ತಮ್ಮ ಪಕ್ಷದಿಂದ ಸ್ಪರ್ಧಿಸುವಂತೆ ಕೇಳುತ್ತಿದ್ದಾರೆ. ಅಲ್ಲದೆ, ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ಬಗ್ಗೆಯೂ ವದಂತಿಗಳಿದ್ದು, ಹಾಗೇನಾದರೂ ಆದರೆ ಜೆಡಿಎಸ್ ಅಸ್ತಿತ್ವ ಕಳೆದುಕೊಳ್ಳಲಿದೆ’ ಎಂದರು.