ಸಾರಾಂಶ
ರಾಮನಗರ: ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ ಅವರಿಗೆ ರಾಜ್ಯಪಾಲರ ಥಾವರ್‌ಚಂದ್ ಗೆಹ್ಲೋಟ್ ಅವರು ಶನಿವಾರ ರಾಜ್ಯಮಟ್ಟದ ಅತ್ಯುತ್ತಮ ಜಿಲ್ಲಾ ಚುನಾವಣಾ ಅಧಿಕಾರಿಗಳ ಪ್ರಶಸ್ತಿ ಪ್ರದಾನ ಮಾಡಿದರು.
ಬೆಂಗಳೂರಿನ ಸರ್ ಪುಟ್ಟಣ್ಣಚೆಟ್ಟಿ ಟೌನ್ ಹಾಲ್‌ನಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು, ರಾಮನಗರ ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ ಅವರಿಗೆ 2024 - 25ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಜಿಲ್ಲಾ ಚುನಾವಣಾ ಅಧಿಕಾರಿಗಳ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕರಾಗಿದ್ದ ದಿಗ್ವಿಜಯ್ ಬೋಡ್ಕೆ, ಶುಕ್ರವಾರವಷ್ಟೇ ಕೆಎಸ್‌ಆರ್‌ಟಿಸಿ ನಿರ್ದೇಶಕ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ. ಅವರು ರಾಮನಗರ ಜಿಪಂ ಸಿಇಒ ಆಗಿದ್ದಾಗ 2024-25ನೇ ಸಾಲಿನಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲು ಸ್ವೀಪ್ ಕಮಿಟಿ ಮೂಲಕ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದ್ದರು.
ಈ ಜಾಗೃತಿ ಕಾರ್ಯಕ್ರಮಗಳಿಂದಾಗಿ 2024ರ ಲೋಕಸಭಾ ಚುನಾವಣೆಯಲ್ಲಿ ಶೇಕಡ 85ರಷ್ಟು ಮತದಾನ ನಡೆದಿತ್ತು. ಅದಕ್ಕೂ ಹಿಂದೆ 2019ರಲ್ಲಿ ಶೇಕಡ 79ರಷ್ಟು ಮತದಾನ ಆಗಿತ್ತು. ಶೇಕಡ 6ರಷ್ಟು ಮತದಾನ ಹೆಚ್ಚಳವಾಗಿತ್ತು. ಇದನ್ನು ಪರಿಗಣಿಸಿ ಚುನಾವಣಾ ಆಯೋಗ ದಿಗ್ವಿಜಯ್ ಬೋಡ್ಕೆ ಅವರನ್ನು ರಾಜ್ಯಮಟ್ಟದ ಅತ್ಯುತ್ತಮ ಜಿಲ್ಲಾ ಚುನಾವಣಾ ಅಧಿಕಾರಿಗಳ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.ದಿಗ್ವಿಜಯ್ ಬೋಡ್ಕೆ ಜೊತೆಗೆ ಈ ಹಿಂದೆ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅವಿನಾಶ್ ಮೆನನ್ ಅವರಿಗೂ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
25ಕೆಆರ್ ಎಂಎನ್ 4.ಜೆಪಿಜಿರಾಮನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕರಾಗಿದ್ದ ದಿಗ್ವಿಜಯ್ ಬೋಡ್ಕೆಗೆ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಶನಿವಾರ ರಾಜ್ಯಮಟ್ಟದ ಅತ್ಯುತ್ತಮ ಜಿಲ್ಲಾ ಚುನಾವಣಾ ಅಧಿಕಾರಿಗಳ ಪ್ರಶಸ್ತಿ ಪ್ರದಾನ ಮಾಡಿದರು.