ಸಾರಾಂಶ
ಕನ್ನಡಪ್ರಭ ವಾರ್ತೆ ಯಾದಗಿರಿ
ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮ ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳ ಸಮನ್ವಯತೆ ಅಗತ್ಯವಾಗಿದ್ದು, ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಹೇಳಿದರು.
ಈ ಕಾರ್ಯಕ್ರಮ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲು ನಡೆದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಲಿಂಗಾನುಪಾತದ ಅಂತರ ಕಡಿಮೆ ಮಾಡುವುದು, ಮಹಿಳಾ ಸಬಲೀಕರಣ ಉತ್ತೇಜಿಸುವುದು ಮತ್ತು ಲಿಂಗ ಅಸಮಾನತೆ ತೊಡೆದುಹಾಕುವ ಉದ್ದೇಶದಿಂದ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಜಾರಿಯಾಗಿದೆ. ಹೆಣ್ಣು ಮಗುವಿಗೆ ಶಿಕ್ಷಣ ಮತ್ತು ಸಮಾಜದಲ್ಲಿ ಅವರ ಭಾಗವಹಿಸುವಿಕೆ ಹೆಚ್ಚಿಸಲು ಪ್ರೇರೇಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿದೆ ಎಂದರು.
ಹೆಣ್ಣು ಮಕ್ಕಳ ಬಾಲ್ಯ ವಿವಾಹ ತಡೆಗಟ್ಟಬೇಕು. ಗರ್ಭಾವಸ್ಥೆ ಹೆಣ್ಣು ಮಕ್ಕಳ ಭ್ರೂಣ ಪರೀಕ್ಷೆಗೆ ಒಳಪಡಿಸಬಾರದು. ಭ್ರೂಣ ಪರೀಕ್ಷೆಗೆ ಒಳಪಡಿಸಿದ ಬಗ್ಗೆ ಜಿಲ್ಲಾಡಳಿತ ಗಮನಕ್ಕೆ ತಂದರೆ ಅಂತವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಪಂಚಾಯತರಾಜ್ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೊಂದಿಗೆ ಹೆಚ್ಚಿನ ಸಹಕಾರ ನೀಡುವುದು ಬಹಳ ಮುಖ್ಯ. ಪ್ರತಿ ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಚ್ಚುಕಟ್ಟಾಗಿ ಮಾಡಲು ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.
ಜಿಪಂ ಸಿಇಒ ಗರಿಮಾ ಪನ್ವಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ವೀರನಗೌಡ, ಮಹಿಳಾ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಪ್ರೇಮಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪ್ರಭುಲಿಂಗ ಮಾನಕರ, ಕ್ರೀಡಾ ಇಲಾಖೆ ಅಧಿಕಾರಿ ರಾಜು ಬಾವಿಹಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ಸೇರಿ ಇತರರಿದ್ದರು.