ಕನ್ನಡಪ್ರಭ ವಾರ್ತೆ ಸಕಲೇಶಪುರ
ತಾಲೂಕಿನ ಇತಿಹಾಸ ಪ್ರಸಿದ್ಧ ಬೆಟ್ಟದ ಭೈರವೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಾಗೂ ಜೀರ್ಣೋದ್ಧಾರ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ಕೈಗೊಳ್ಳುವ ಉದ್ದೇಶದಿಂದ ಸರ್ಕಾರದ ಮುಜರಾಯಿ ಇಲಾಖೆ ಮಾರ್ಗಸೂಚಿಯಂತೆ ಜೀರ್ಣೋದ್ಧಾರ ಸಮಿತಿಯನ್ನು ಶೀಘ್ರದಲ್ಲೇ ರಚಿಸಲಾಗುವುದು ಎಂದು ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಹೇಳಿದರು.ತಾಲೂಕು ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಗ್ರಾಮಸ್ಥರು ಹಾಗೂ ತಾಲೂಕು ಆಡಳಿತದ ಸಲಹೆ ಪಡೆದು ಸಮಿತಿಯ ಸದಸ್ಯರನ್ನು ನೇಮಕ ಮಾಡಲಾಗುವುದು. ಬಳಿಕ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ, ಸರ್ಕಾರದ ನಿಯಮಾನುಸಾರ ಸಮಿತಿಗೆ ಅಂತಿಮ ಅನುಮೋದನೆ ಪಡೆಯಲಾಗುವುದು ಎಂದರು.
ಬೆಟ್ಟದ ಭೈರವೇಶ್ವರ ದೇವಸ್ಥಾನವು ಧಾರ್ಮಿಕ, ಐತಿಹಾಸಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಕ್ಷೇತ್ರವಾಗಿದೆ. ಕ್ಷೇತ್ರದ ಪಾವಿತ್ರ್ಯವನ್ನು ಕಾಪಾಡುತ್ತಲೇ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ. ಸ್ಥಳೀಯರ ಸಹಕಾರದೊಂದಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.ಮಲೆನಾಡಿನ ಆರ್ಥಿಕತೆಯಲ್ಲಿ ಕಾಫಿ ಬೆಳೆ ಪ್ರಮುಖ ಆಧಾರವಾಗಿದ್ದು, ವರ್ಷಕ್ಕೊಮ್ಮೆ ಮಾತ್ರ ಆದಾಯ ತರುತ್ತದೆ. ಉಳಿದ ಅವಧಿಯಲ್ಲಿ ಹೋಂಸ್ಟೇ, ರೆಸಾರ್ಟ್ ಹಾಗೂ ಪ್ರವಾಸೋದ್ಯಮವೇ ಸಾವಿರಾರು ಕುಟುಂಬಗಳ ಜೀವನೋಪಾಯಕ್ಕೆ ಬೆನ್ನೆಲುಬಾಗಿದೆ. ಬೆಟ್ಟದ ಭೈರವೇಶ್ವರ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಕೆಲವು ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ಇರುವುದರಿಂದ ಹೋಂಸ್ಟೇ ಮತ್ತು ರೆಸಾರ್ಟ್ ಉದ್ಯಮಕ್ಕೆ ತೊಂದರೆಯಾಗುತ್ತಿರುವುದು ವಾಸ್ತವ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯೊಂದಿಗೆ ಈಗಾಗಲೇ ಚರ್ಚೆ ನಡೆಸಲಾಗುತ್ತಿದ್ದು, ಸರ್ಕಾರವೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಸಾರ್ವಜನಿಕರಿಗೆ ಪ್ರವೇಶ ನೀಡಬಹುದಾದ ಪ್ರದೇಶಗಳನ್ನು ಗುರುತಿಸಿ, ಸರ್ಕಾರದ ಮಾರ್ಗಸೂಚಿಯಂತೆ ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆ ಜಾರಿಗೊಳಿಸಿ, ನಿಗದಿತ ಶುಲ್ಕ ಪಾವತಿಸಿದವರಿಗೆ ಅನುಮತಿ ನೀಡುವ ವ್ಯವಸ್ಥೆ ರೂಪಿಸಿದರೆ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ಸಿಗಲಿದೆ. ಅದೇ ವೇಳೆ ಇತಿಹಾಸ ಪ್ರಸಿದ್ಧ ಬೆಟ್ಟದ ಭೈರವೇಶ್ವರ ದೇವಸ್ಥಾನದ ಪಾವಿತ್ರ್ಯ, ಪರಿಸರ ಸಂರಕ್ಷಣೆ ಹಾಗೂ ಭಕ್ತರ ಧಾರ್ಮಿಕ ಭಾವನೆಗಳಿಗೆ ಯಾವುದೇ ಧಕ್ಕೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಚ್. ಎಂ ವಿಶ್ವನಾಥ್, ತಹಸೀಲ್ದಾರ್ ಕೆ.ಎಸ್ ಸುಪ್ರಿತಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಾಧರನ್, ಗ್ರಾಮಾಂತರ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಪಾಟೀಲ್, ವಲಯ ಅರಣ್ಯ ಅಧಿಕಾರಿ ಹೇಮಂತ್ ಸೇರಿದಂತೆ ಗ್ರಾಮಸ್ಥರು ಮುಖಂಡರು ಉಪಸ್ಥಿತರಿದ್ದರು.