ಮಕ್ಕಳ ಸ್ನೇಹಿ ಪರಿಸರದಿಂದ ಉತ್ತಮ ಸಮಾಜ

| Published : Dec 17 2024, 12:45 AM IST

ಸಾರಾಂಶ

ಚಾಮರಾಜನಗರದಲ್ಲಿ ಮಕ್ಕಳೊಂದಿಗೆ ಸಂವಾದ, ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪ್ರತಿ ಮಗುವನ್ನು ಮಕ್ಕಳ ಸ್ನೇಹಿ ಪರಿಸರದಲ್ಲಿ ಬೆಳೆಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಅವರು ತಿಳಿಸಿದರು.

ನಗರದ ಹಳೇ ಕೆಡಿಪಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ "ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ " ಎಂಬ ಶೀರ್ಷಿಕೆಯಡಿ ಆರ್‌ಟಿಇ ಕಾಯ್ದೆಯ ಅನುಷ್ಠಾನ ಹಾಗೂ ಮಕ್ಕಳೊಂದಿಗೆ ಸಂವಾದ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳನ್ನು ಉತ್ತಮ ವಾತಾವರಣದಲ್ಲಿ ಬೆಳೆಸಬೇಕು. ಆಗ ಮಾತ್ರ ಸದೃಢ ಸಮಾಜ ನಿರ್ಮಿಸಲು ಸಾಧ್ಯವಾಗಲಿದೆ. ಮಕ್ಕಳಿಗೆ ಸಾಮಾಜಿಕ ನ್ಯಾಯ, ಸಹೋದರತ್ವ, ಭ್ರಾತೃತ್ವ ಭಾವನೆಗಳಿಂದ ಕೂಡಿದ ಮೌಲ್ಯಯುತ ಶಿಕ್ಷಣ ನೀಡಬೇಕು. ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಶಾಲೆಯಲ್ಲಿ ಶಿಕ್ಷಣದ ಜೊತೆಗೆ ರಕ್ಷಣೆ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಸರ್ಕಾರದ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜೊತೆಗೂಡಿ ರಾಜ್ಯಾದ್ಯಂತ ಆರ್‌ಟಿಇ ಕಾಯ್ದೆ ಅನುಷ್ಠಾನದ ಬಗ್ಗೆ ಸಂವಾದ, ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಆರ್‌ಟಿಇ ಕಾಯ್ದೆಯು ಮಕ್ಕಳ ಪ್ರತಿಭೆಗಳನ್ನು ಹೊರ ತರಲು ಅನೇಕ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಕಲ್ಪಿಸಿದೆ ಎಂದು ತಿಳಿಸಿದರು.

ಸಂವಿಧಾನದದಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕನ್ನು ನೀಡಿದೆ. ವಿಶ್ವಸಂಸ್ಥೆಯಲ್ಲಿ ಮಕ್ಕಳ ಹಕ್ಕುಗಳ ಒಡಂಬಡಿಕೆ ಅಂಗೀಕಾರವಾದ ನಂತರ ದೇಶದಲ್ಲಿ ಮಕ್ಕಳ ಹಕ್ಕು ಕಾಯ್ದೆಗಳಿಗೆ ತಿದ್ದುಪಡಿ ತರಲಾಗಿದೆ. ಅದರಲ್ಲಿ ಬಹಳ ಮುಖ್ಯವಾದದ್ದು ಬಾಲ ನ್ಯಾಯ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಎಂದು ತಿಳಿಸಿದರು.

ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ ಕುರಿತು ಮೊದಲ ಬಾರಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಕ್ಕಳೊಂದಿಗೆ ಸಂವಾದ ನಡೆಸಿ ಮಕ್ಕಳ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುತ್ತದೆ. ಈ ಸಂವಾದದಲ್ಲಿ ಮಕ್ಕಳ ಪ್ರಶ್ನೆಗಳನ್ನು ಆಧರಿಸಿ ಆಯೋಗದ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ಮಕ್ಕಳೊಂದಿಗೆ ಸಂವಾದ ನಡೆಯಿತು. ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಜಿಲ್ಲಾಮಟ್ಟದ ಅಧಿಕಾರಿಗಳು ಉತ್ತರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಂಜುನಾಥ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಸವಿತಾ, ತಾಲೂಕು ವೈದ್ಯಾಧಿಕಾರಿ ಡಾ.ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ, ಬಾಲನ್ಯಾಯ ಮಂಡಳಿ ಸದಸ್ಯರಾದ ಸರಸ್ವತಿ, ಗಂಗಾಧರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.