ಕನ್ನಡಪ್ರಭ ವಾರ್ತೆ ಬೆಳಗಾವಿ ಜಿಲ್ಲೆಯ ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿಗಳ ಸಮರ್ಪಕ ಬಳಕೆ ಮತ್ತು ಸರಿಯಾದ ನಿರ್ವಹಣೆ ಆಗಬೇಕು. ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ಔಷಧಿಗಳ ಕೊರತೆ ಉಂಟಾಗಬಾರದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಜಿಲ್ಲಾ ಆರೋಗ್ಯ ಸಂಘದ ಪ್ರಗತಿ ಪರಿಶೀಲನಾ ಸಭೆಗೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಯುಷ್ಮಾನ್ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯಡಿ ಎಲ್ಲಾ ಆರೋಗ್ಯ ಸಂಸ್ಥೆಗಳಿಗೆ ಅನುದಾನ ಲಭ್ಯವಿದ್ದು, ಅದರಂತೆ ಔಷಧಿಗಳ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ಖರೀದಿಸಿದ ಔಷಧಿಗಳನ್ನು ಸಂಬಂಧಿಸಿದ ಜಾಲತಾಣದಲ್ಲಿ ಸರಿಯಾಗಿ ದಾಖಲಿಸಿ, ಸರಬರಾಜು ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಲಸ್ವಾಸ್ಥ್ಯ ತಂಡಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಎರಡು ತಿಂಗಳಿಗೊಮ್ಮೆ ವಸತಿ ನಿಲಯಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಮಾದರಿ ಪರೀಕ್ಷೆ ನಡೆಸಬೇಕು. ಜೊತೆಗೆ ಮಕ್ಕಳ ಮಾನಸಿಕ ಆರೋಗ್ಯ ಕುರಿತು ತಪಾಸಣೆ ನಡೆಸಿ ಅವರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಈ ಕುರಿತು ಮಾಡಿದ ಭೇಟಿಗಳ ವಿವರಗಳನ್ನು ದಾಖಲಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.ಇನ್ನು, ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮದಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಸೂಚನೆ ನೀಡಲಾಗಿದೆ. ಮೂರು ದಿನಗಳೊಳಗಾಗಿ ಪತ್ರಿಕೆಯಲ್ಲಿ ಪ್ರಕಟಣೆ ನೀಡಿ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅಂಧತ್ವ ನಿವಾರಣಾ ಕಾರ್ಯಕ್ರಮದಡಿ ರಾಮದುರ್ಗ, ಸವದತ್ತಿ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಯ ಪ್ರಗತಿ ಕಡಿಮೆಯಾಗಿದೆ. ಖಾಸಗಿ ಸಂಸ್ಥೆಗಳಿಗೆ ಕಡಿಮೆ ಗುರಿ ನಿಗದಿಪಡಿಸಿರುವುದು ಹಾಗೂ ಸಂಬಂಧಿತ ಪ್ರದೇಶಗಳಲ್ಲಿ ಶಸ್ತ್ರಚಿಕಿತ್ಸಾ ಸೌಲಭ್ಯಗಳ ಕೊರತೆ ಇರುವುದು ಇದಕ್ಕೆ ಕಾರಣ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ವಿಶೇಷ ದಿನಗಳು ಹಾಗೂ ಜಯಂತಿಗಳ ಸಂದರ್ಭದಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳುವಳಿಕೆ ನೀಡಲಾಯಿತು.

ಇನ್ನು, ಸಭೆಗೆ ಗೈರಾಗಿದ್ದ ಅಧಿಕಾರಿಗಳು ಮುಂದಿನ ಸಭೆಯಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡಾದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.