ಕಳಪೆ ಬಿತ್ತನೆ ಬೀಜ ಪೂರೈಕೆಯಾಗದಂತೆ ಎಚ್ಚರ ವಹಿಸಿ: ಟಿ.ವೆಂಕಟೇಶ್

| Published : May 23 2024, 01:02 AM IST

ಕಳಪೆ ಬಿತ್ತನೆ ಬೀಜ ಪೂರೈಕೆಯಾಗದಂತೆ ಎಚ್ಚರ ವಹಿಸಿ: ಟಿ.ವೆಂಕಟೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಮುಂಗಾರು ಹಂಗಾಮಿನ ಪೂರ್ವ ಸಿದ್ಧತಾ ಕಾರ್ಯಾಗಾರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಬಗ್ಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ, ಚಿತ್ರದುರ್ಗ

ಮುಂಗಾರು ಹಂಗಾಮಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣದಿಂದ ಕಳಪೆ ಬಿತ್ತನೆ ಬೀಜ ನುಸುಳದಂತೆ ಎಚ್ಚರವಹಿಸಬೇಕೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಪೂರ್ವ ಸಿದ್ಧತಾ ಕಾರ್ಯಾಗಾರ ಹಾಗೂ ಕೃಷಿ ಪರಿಕರಗಳ ಮಾರಾಟಗಾರರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಿತ್ರದುರ್ಗ ಕೃಷಿಯಾಧಾರಿತ ಜಿಲ್ಲೆಯಾಗಿದ್ದು, ಈ ಬಾರಿ ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದೆ. ಮುಂಗಾರು ಹಂಗಾಮಿಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕಾಗಿದೆ. ಜಿಲ್ಲೆಯಲ್ಲಿ 3 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ನಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಗುರಿ ಹೊಂದಲಾಗಿದೆ. ಹಾಗಾಗಿ ಮುಖ್ಯವಾಗಿ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಕೃಷಿ ಚಟುವಟಿಕೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಕೆ, ಹೊಸ ತಳಿ ಹಾಗೂ ಹೆಚ್ಚಿನ ಇಳುವರಿಯ ಬಿತ್ತನೆ ಬೀಜಗಳ ಪರಿಚಯವನ್ನು ನಿಗಧಿತ ಸಮಯದಲ್ಲಿ, ನಿರ್ದಿಷ್ಟ ಅವಧಿಯಲ್ಲಿ ರೈತರಿಗೆ ಅಗತ್ಯ ಮಾಹಿತಿ ತಲುಪಿಸುವ ವ್ಯವಸ್ಥೆ ಮಾಡಬೇಕು ಎಂದರು.

ಜಿಲ್ಲೆಯ ಅಗತ್ಯಕ್ಕೆ ತಕ್ಕಂತೆ ಬಿತ್ತನೆ ಬೀಜ, ರಸಗೊಬ್ಬರ ಪ್ರಮಾಣವನ್ನು ದಾಸ್ತಾನು ಮಾಡಿಕೊಳ್ಳಬೇಕು. ಬಿತ್ತನೆ ಬೀಜದ ಗುಣಮಟ್ಟವನ್ನು ಪರಿಶೀಲನೆ ನಡೆಸಿ, ನಿಗದಿತ ಅವಧಿಯಲ್ಲಿ ಪೂರೈಕೆ ಮಾಡಬೇಕು. ಮುಂಗಾರು ಪೂರ್ವ ಸಿದ್ಧತೆಯ ಈ ಹಂತದಲ್ಲಿ ರೈತರಿಗೆ ಅಗತ್ಯವಾಗಿ ಬೇಕಾಗಿರುವ ಸಲಹೆ ಸೂಚನೆಗಳನ್ನು ನೀಡುವುದು ಕೃಷಿ ಇಲಾಖೆ ಅಧಿಕಾರಿಗಳ ಕರ್ತವ್ಯವೂ ಹೌದು ಎಂದು ತಿಳಿಸಿದರು.

ಬೆಳೆವಿಮೆ ಹಾಗೂ ಬೆಳೆ ನಷ್ಟ ಪರಿಹಾರ ಪಾವತಿಗೆ ಸಂಬಂಧಪಟ್ಟಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾ ಧಿಕಾರಿಗಳ ಕಚೇರಿ ಸೇರಿದಂತೆ ಜಿಲ್ಲೆಯ ಆಯಾ ತಾಲೂಕು ಕಚೇರಿಗಳಲ್ಲಿ ಸಹಾಯವಾಣಿ ಕೇಂದ್ರಗಳ ಸ್ಥಾಪಿಸಿ, ರೈತರಿಂದ ದೂರುಗಳನ್ನು ಸ್ವೀಕೃತಿ ಮಾಡಲಾಗುತ್ತಿದೆ. ಕೆಲವು ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿ ಸುತ್ತಿಲ್ಲ ಎಂಬ ದೂರುಗಳಿವೆ. ಬೆಳೆ ವಿಮೆ ಹಾಗೂ ಬೆಳೆನಷ್ಟ ಪಾವತಿ ಸಂಬಂಧ ಹಾಗೂ ರೈತರ ಸಮಸ್ಯೆಗಳಿಗೆ ಸರಿಯಾದ ಮಾಹಿತಿ ನೀಡದೇ ಇರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.

ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿಯ ಹಣ, ಬೆಳೆವಿಮೆ ಹಾಗೂ ಬೆಳೆನಷ್ಟ ಪರಿಹಾರ ಸೇರಿದಂತೆ ಸರ್ಕಾರದ ವಿವಿಧ ಯೋಜನೆಯ ಮೊತ್ತವನ್ನು ಬ್ಯಾಂಕ್‍ಗಳು ಯಾವುದೇ ಕಾರಣಕ್ಕೂ ಕಡ್ಡಾಯವಾಗಿ ರೈತರ ಇತರೆ ಸಾಲಕ್ಕೆ ಜಮೆ ಮಾಡಿಕೊಳ್ಳ ಬಾರದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕಳೆದ ಬಾರಿ ಕೈಗೊಂಡಿರುವ ಬೆಳೆ ಸಮೀಕ್ಷೆ ಪ್ರಯೋಗಗಳ ವ್ಯಾತ್ಯಾಸದಿಂದಾಗಿ ಸುಮಾರು ರೈತರಿಗೆ ಬೆಳೆವಿಮೆ ಪಾವತಿಯಾಗಿಲ್ಲ. ಹಾಗಾಗಿ ಮರು ಬೆಳೆ ಸಮೀಕ್ಷೆ ಪ್ರಯೋಗ ನಡೆಸಿ ಬೆಳೆವಿಮೆ ಪಾವತಿ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆದರೆ ಪ್ರಸಕ್ತ ಸಾಲಿನ ಬೆಳೆ ಸಮೀಕ್ಷೆ ಪ್ರಯೋಗಗಳ ಸಂದರ್ಭದಲ್ಲಿ ಇಂತಹ ವ್ಯತ್ಯಾಸಗಳು ಆಗಬಾರದು. ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಪ್ರಯೋಗ ಕೈಗೊಳ್ಳುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಾರ್ಯಾಗಾರ ಹಮ್ಮಿ ಕೊಂಡು, ಬೆಳೆ ಸಮೀಕ್ಷೆ ಪ್ರಯೋಗಗಳ ಕುರಿತು ಮಾಹಿತಿ ನೀಡಲಾಗುವುದು. ಬೆಳೆ ಸಮೀಕ್ಷೆ ಪ್ರಯೋಗಗಳನ್ನು ಕ್ರಮಬದ್ಧ ವಾಗಿ, ನಿಯಮಬದ್ಧವಾಗಿ ಮಾಡಬೇಕು ಎಂದರು.

ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಮಾತನಾಡಿ, ಜಿಲ್ಲೆಯ ಸುಮಾರು 80 ಸಾವಿರ ರೈತರಿಗೆ ರು. 284 ಕೋಟಿ ಬೆಳೆವಿಮೆ ಪಾವತಿಯಾಗಿದೆ. ಇದರ ಜೊತೆಗೆ ರು.144 ಕೋಟಿ ಬೆಳೆಹಾನಿ ಪರಿಹಾರ ಸೇರಿದಂತೆ ಒಟ್ಟು ರು. 400 ಕೋಟಿ ಪರಿಹಾರದ ಹಣ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದರು.

3 ಲಕ್ಷ 4 ಸಾವಿರ ಹೆಕ್ಟೇರ್ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಗುರಿ ಇಟ್ಟುಕೊಳ್ಳಲಾಗಿದೆ. ಪ್ರಮುಖವಾಗಿ 1 ಲಕ್ಷ 14 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ ಬಿತ್ತನೆ, ಮುಸುಕಿನ ಜೋಳ ಸುಮಾರು 90 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಲಿದೆ. 50 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರಾಗಿ, 21 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯಗಳು ಬಿತ್ತನೆಯಾಗಲಿದೆ. ಮುಂಗಾರು ಹಂಗಾಮಿಗೆ ಸಂಬಂಧಪಟ್ಟಂತೆ ಜಿಲ್ಲೆಗೆ 64 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ಅವಶ್ಯಕತೆ ಇದೆ. 12 ಸಾವಿರ ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರ ಬಿತ್ತನೆ ಸಂದರ್ಭದಲ್ಲಿ ಅವಶ್ಯಕತೆ ಇದ್ದು, ಪ್ರಸ್ತುತ 4 ಸಾವಿರ ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರ ದಾಸ್ತಾನು ಇದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷ ರೇವಣಸಿದ್ದಪ್ಪ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ತಿಮ್ಮಪ್ಪ, ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ಓಂಕಾರಪ್ಪ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ತಿಪ್ಪೇಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಕುಮಾರಸ್ವಾಮಿ, ಉಪಕೃಷಿ ನಿರ್ದೇಶಕರಾದ ಶಿವಕುಮಾರ್, ಪ್ರಭಾಕರ್, ಸಹಾಯಕ ಕೃಷಿ ನಿರ್ದೇಶಕರಾದ ಚಂದ್ರಕುಮಾರ್, ಪ್ರವೀಣ್ ಚೌಧರಿ, ತಹಶೀಲ್ದಾರ್ ಡಾ.ನಾಗವೇಣಿ, ಇಪ್ಕೊ ಸಂಸ್ಥೆಯ ಜಿಲ್ಲಾಮಟ್ಟದ ಅಧಿಕಾರಿ ಚಿದಂಬರಂ ಇದ್ದರು,