ನಾಳೆ ಭಾಗಮಂಡಲ ಮೇಲ್ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಉದ್ಘಾಟನೆ

| Published : Jan 30 2025, 12:31 AM IST

ನಾಳೆ ಭಾಗಮಂಡಲ ಮೇಲ್ಸೇತುವೆ ಲೋಕಾರ್ಪಣೆ: ಮುಖ್ಯಮಂತ್ರಿ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಕಾವೇರಿ ಕ್ಷೇತ್ರ ಭಾಗಮಂಡಲದಲ್ಲಿ ಸುಮಾರು 30 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೇಲು ಸೇತುವೆಯನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರ ಟಿ.ಪಿ.ರಮೇಶ್ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕಾವೇರಿ ಕ್ಷೇತ್ರ ಭಾಗಮಂಡಲದಲ್ಲಿ ಸುಮಾರು 30 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೇಲು ಸೇತುವೆಯನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರ ಟಿ.ಪಿ.ರಮೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್, ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್‌.ಭೋಸರಾಜು, ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು. ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್‌ನ ಪದಾಧಿಕಾರಿಗಳು, ಕಾರ್ಯಕರ್ತರು, ಭಾಗಮಂಡಲದ ಸಾರ್ವಜನಿಕರು ಅದ್ಧೂರಿಯಾಗಿ ಸ್ವಾಗತಿಸಲಿದ್ದಾರೆ ಎಂದು ತಿಳಿಸಿದರು.

ಪ್ರವಾಹ ಸಂಕಷ್ಟಕ್ಕೆ ಮುಕ್ತಿ:

ಮುಂಗಾರಿನ ಅವಧಿಯಲ್ಲಿ ವರ್ಷಂಪ್ರತಿ ಭಾಗಮಂಡಲ ಕ್ಷೇತ್ರ ಕಾವೇರಿ ನದಿ ಪ್ರವಾಹಕ್ಕೆ ಸಿಲುಕಿ, ಅಲ್ಲಿನ ನಿವಾಸಿಗಳು ಹಾಗೂ ಪುಣ್ಯ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳು ಸಂಕಷ್ಟಕ್ಕೆ ಸಿಲುಕುತ್ತಿದ್ದರು. ಸುಮಾರು ಒಂಭತ್ತು ವರ್ಷಗಳ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಸ್ಥಳಕ್ಕೆ ಭೇಟಿ ನೀಡಿ ಜನರ ಮೂಲಭೂತ ಸಮಸ್ಯೆಗಳನ್ನು ಆಲಿಸಿ, ಮೇಲ್ಸೇತುವೆ ನಿರ್ಮಾಣದ ಅಗತ್ಯ ಮನಗಂಡು ಯೋಜನೆ ಘೋಷಿಸಿದರು. ಸುಮಾರು 30 ಕೋಟಿ ರು. ಅನುದಾನವನ್ನು ವಿವಿಧ ಹಂತಗಳಲ್ಲಿ ಒದಗಿಸಲಾಗಿತ್ತು. ನಂತರದ ಬಿಜೆಪಿಯ 5 ವರ್ಷಗಳ ಅವಧಿಯಲ್ಲಿ ಕಾಮಗಾರಿ ಮಂದಗತಿಯಲ್ಲಿ ಸಾಗಿತು ಎಂದರು.

ಇದೀಗ ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಕಾಮಗಾರಿ ಪೂರ್ಣಗೊಳಿಸಲು ವಿಶೇಷ ಕಾಳಜಿ ವಹಿಸಿ ಇದೀಗ ಉದ್ಘಾಟನೆಗೆ ಸಜ್ಜಾಗಿದೆ ಎಂದು ಟಿ.ಪಿ.ರಮೇಶ್ ಹೇಳಿದರು.

ಹಿಂದೆ ರಾಜ್ಯದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾವೇರಿ ಕ್ಷೇತ್ರದ ಅಭಿವೃದ್ಧಿಗೆ ಕಾಳಜಿ ವಹಿಸಿ ಕಾವೇರಿ ನೀರಾವರಿ ನಿಗಮದ ಮೂಲಕ 12 ಕೋಟಿ ರು.ಗಳನ್ನು ಒದಗಿಸಿದ್ದರು. ಇದರ ಬಳಕೆಯ ಮೂಲಕ ಕ್ಷೇತ್ರ ಅಭಿವೃದ್ಧಿಯನ್ನು ಕಂಡಿದೆ ಎಂದ ಅವರು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಆಸಕ್ತಿಯಿಂದ 1 ಕೋಟಿ ರು. ವೆಚ್ಚದಲ್ಲಿ ಉದ್ಯಾನವನ ನಿರ್ಮಾಣಗೊಂಡಿದೆ ಎಂದರು. ಜಿಲ್ಲಾ ಕೇಂದ್ರ ಮಡಿಕೇರಿಯಿಂದ ಭಾಗಮಂಡಲಕ್ಕೆ ತೆರಳುವ ರಸ್ತೆಯ ಅಭಿವೃದ್ಧಿಗೆ ವಿಶೇಷ ಕಾರ್ಯಯೋಜನೆಯನ್ನು ಸರ್ಕಾರದ ಮುಂದಿರಿಸಿದ್ದಾರೆ. ಅಗತ್ಯವಾದ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳುವ ಮೂಲಕ ಜಿಲ್ಲೆಯ ಸರ್ವತೋಮುಖ ಪ್ರಗತಿಯತ್ತ ಮುನ್ನಡೆಯುತ್ತಿರುವುದಾಗಿ ಹೇಳಿದರು.

ಜಿಲ್ಲೆಯಲ್ಲಿ ವಿದ್ಯುತ್ ಮತ್ತು ವೋಲ್ವೇಜ್ ಸಮಸ್ಯೆಗಳಿರುವುದನ್ನು ಮನಗಂಡು, ದಕ್ಷಿಣ ಕೊಡಗಿನ ಶ್ರೀಮಂಗಲದಲ್ಲಿ ವಿದ್ಯುತ್ ಉಪ ಕೇಂದ್ರ ಆರಂಭ ಸೇರಿದಂತೆ ವಿದ್ಯುತ್ ಮಾರ್ಗಗಳ ಬಲವರ್ಧನೆಗೆ ಸುಮಾರು 200 ಕೋಟಿ ರು. ಖರ್ಚು ಮಾಡಲಾಗುತ್ತಿದೆ ಎಂದು ರಮೇಶ್ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಮುನೀರ್ ಅಹಮ್ಮದ್, ಕೊಲ್ಯದ ಗಿರೀಶ್ ಹಾಗೂ ಕಾಂಗ್ರೆಸ್ ಸೇವಾ ದಳದ ಜಿಲ್ಲಾಧ್ಯಕ್ಷ ಕಾನೆಹಿತ್ತು ಮೊಣ್ಣಪ್ಪ ಸುದ್ದಿಗೋಷ್ಠಿಯಲ್ಲಿದ್ದರು .