ಭಾರತ್ ಬ್ರಾಂಡ್ ಪಂಚ ಗ್ಯಾರಂಟಿಗೂ ಮಿಗಿಲಾದದ್ದು

| Published : Feb 09 2024, 01:46 AM IST

ಸಾರಾಂಶ

ಕೇಂದ್ರ ಸರ್ಕಾರವು ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ವರ್ಗದವರಿಗೂ ಕಡಿಮೆ ದರದಲ್ಲಿ ಅಕ್ಕಿ ನೀಡುವ ಭಾರತ್ ಬ್ರಾಂಡ್ ಯೋಜನೆ ಜಾರಿಗೊಳಿಸಿದೆ. ಪ್ರತಿ ಕೆ.ಜಿ ಅಕ್ಕಿಯನ್ನು ಕೇವಲ 29 ರೂ. ದರದಲ್ಲಿ ಮಾರಲು ಭಾರತ್ ಬ್ರಾಂಡ್ ಯೋಜನೆ ಬಿಡುಗಡೆಗೊಳಿಸಿದೆ. ಬಡವರು, ಮಧ್ಯಮ ವರ್ಗದವರಿಗೆ ಮಾತ್ರವಲ್ಲದೆ, ಎಲ್ಲಾ ವರ್ಗದವರಿಗೂ ಅನುಕೂಲವಾಗಲಿದೆ

- ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ- ಮೈಸೂರು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಕನ್ನಡಪ್ರಭ ವಾರ್ತೆ ಮೈಸೂರು

ಕೇಂದ್ರದ ಸರ್ಕಾರ ದೇಶದ ಎಲ್ಲಾ ವರ್ಗದವರಿಗೆ ಕಡಿಮೆ ದರದಲ್ಲಿ ಅಕ್ಕಿ ನೀಡುವ ಭಾರತ್ ಬ್ರ್ಯಾಂಡ್ ಯೋಜನೆಯು ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗೂ ಮಿಗಿಲಾದದ್ದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಗುರುವಾರ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರವು ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ವರ್ಗದವರಿಗೂ ಕಡಿಮೆ ದರದಲ್ಲಿ ಅಕ್ಕಿ ನೀಡುವ ಭಾರತ್ ಬ್ರಾಂಡ್ ಯೋಜನೆ ಜಾರಿಗೊಳಿಸಿದೆ. ಪ್ರತಿ ಕೆ.ಜಿ ಅಕ್ಕಿಯನ್ನು ಕೇವಲ 29 ರೂ. ದರದಲ್ಲಿ ಮಾರಲು ಭಾರತ್ ಬ್ರಾಂಡ್ ಯೋಜನೆ ಬಿಡುಗಡೆಗೊಳಿಸಿದೆ. ಬಡವರು, ಮಧ್ಯಮ ವರ್ಗದವರಿಗೆ ಮಾತ್ರವಲ್ಲದೆ, ಎಲ್ಲಾ ವರ್ಗದವರಿಗೂ ಅನುಕೂಲವಾಗಲಿದೆ ಎಂದರು.

ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕಾರ್ಯ ಸಂಪೂರ್ಣ ಮರೆತಿದೆ. ರಾಜ್ಯ ಸರ್ಕಾರದ ವೈಫಲ್ಯ ಹೇಳುವ ಜತೆಗೆ ಮೋದಿ ಸರ್ಕಾರದ ಯೋಜನೆಯನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯಿಂದ ದಲಿತರ ಕಲ್ಯಾಣ ಕಾರ್ಯಕ್ರಮಕ್ಕೆ ಮೀಸಲಿಟ್ಟಿದ್ದ ಅನುದಾನವನ್ನೂ ಕಡಿತಗೊಳಿಸಿ ಅನ್ಯ ಯೋಜನೆಗೆ ಬಳಸಿಕೊಂಡಿದೆ. ಬರೀ ಸುಳ್ಳು ಹೇಳಿಕೊಂಡು ದಲಿತರು, ಹಿಂದುಳಿದವ ದಾರಿ ತಪ್ಪಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನ ಇಲ್ಲದೆ ಪರದಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದ ಮೂಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅಭಿವೃದ್ಧಿ ಕಾರ್ಯ ಸಂಪೂರ್ಣ ಕುಸಿತವಾಗಿದೆ. ಬಿಜೆಪಿಯಲ್ಲಿ ನಡೆದ ವ್ಯತ್ಯಾಸಗಳು ಮತ್ತು ಜನರಿಗೆ ಸುಳ್ಳು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಆರ್ಥಿಕ ಪರಿಸ್ಥಿತಿ ಸರಿದೂಗಿಸಲು ಸಾಧ್ಯವಾಗಿಲ್ಲ ಎಂದು ಅವರು ಟೀಕಿಸಿದರು.

ಪ್ರಧಾನಿ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿ ಸ್ಥಾನಕ್ಕೆ ಕೂರಿಸಲು ರಾಜ್ಯದಲ್ಲಿ 28 ಸ್ಥಾನ ಗೆಲ್ಲಬೇಕು. ಕಾಂಗ್ರೆಸ್ ಸರ್ಕಾರ ಇದ್ದರೂ ಜನರು ಬಿಜೆಪಿ ಪರವಾಗಿ ಒಲವು ತೋರಿಸುತ್ತಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಜನರು ತಕ್ಕಪಾಠ ಕಲಿಸುತ್ತಾರೆ ಎಂದು ಅವರು ಹೇಳಿದರು.

ಶಾಸಕ ಟಿ.ಎಸ್. ಶ್ರೀವತ್ಸ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ. ರಾಜೇಂದ್ರ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಡಾ. ಅನಿಲ್ ಥಾಮಸ್, ನಿಗಮ ಮಂಡಳಿಗಳ ಮಾಜಿ ಅಧ್ಯಕ್ಷರಾದ ಎಸ್. ಮಹದೇವಯ್ಯ, ಕೋಟೆ ಎಂ. ಶಿವಣ್ಣ, ಮಿರ್ಲೆ ಶ್ರೀನಿವಾಸಗೌಡ, ಎನ್.ಆರ್. ಕೃಷ್ಣಪ್ಪಗೌಡ, ಎಂ. ಅಪ್ಪಣ್ಣ, ಮಾಜಿ ಸಚಿವ ಸಿ.ಎಚ್. ವಿಜಯಶಂಕರ್, ಮಾಜಿ ಶಾಸಕರಾದ ತೋಂಟದಾರ್ಯ, ಬಿ. ಹರ್ಷವರ್ಧನ, ಸಿ. ರಮೇಶ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಪ್ರಧಾನ ಕಾರ್ಯದರ್ಶಿಗಳಾದ ಮಳವಾಡಿ ಮಹೇಶ್, ಬಾಲಕೃಷ್ಣ, ಕಿರಣ್ ಜಯರಾಮೇಗೌಡ, ಮಾಜಿ ಪ್ರಧಾನ ಕಾರ್ಯದರ್ಶಿ ದೇವನೂರು ಪ್ರತಾಪ್, ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ, ವಿಭಾಗೀಯ ಪ್ರಭಾರಿ ಮೈ.ವಿ. ರವಿಶಂಕರ್, ಮೈಮುಲ್ ಮಾಜಿ ನಿರ್ದೇಶಕ ಎಸ್.ಸಿ. ಅಶೋಕ್ ಮೊದಲಾದವರು ಇದ್ದರು.

ಪ್ರಧಾನಿ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿಸಲು ಎಲ್ಲಾ ಕಾರ್ಯಕರ್ತರು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟಿಸಲಾಗುವುದು. ಲೋಕಸಭಾ ಚುನಾವಣೆಯಲ್ಲಿ ಮೈಸೂರು ಅಭ್ಯರ್ಥಿ ಗೆಲ್ಲಿಸುವುದು, ತಾಪಂ, ಜಿಪಂ ಚುನಾವಣೆಯಲ್ಲಿ ಅಧಿಕಾರ ಹಿಡಿಯುವ ಗುರಿ ನಮ್ಮದು.

- ಎಲ್.ಆರ್. ಮಹದೇವಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷರು