ಕನ್ನಡಪ್ರಭ ವಾರ್ತೆ ಹಾಸನ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಬುದ್ಧಿಮಟ್ಟವನ್ನು ವಿವಿಧ ಕ್ಷೇತ್ರಗಳಲ್ಲಿ ವಿಕಸನಗೊಳಿಸಿ, ಅವರ ಶೈಕ್ಷಣಿಕ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ದಾನಿ ಶ್ರೀಮತಿ ಭಾರ್ಗವಿ ಗೋಪಿನಾಥ್ ಹೇಳಿದರು.ತಾಲೂಕಿನ ಶಾಂತಿಗ್ರಾಮ ಪಬ್ಲಿಕ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಸೂಕ್ತ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯ ಎಂದರು. ಕಾರ್ಯಕ್ರಮವನ್ನು ಶಾಂತಿಗ್ರಾಮ ಹಳೆಯ ಶಾಲಾಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಲಾಗಿತ್ತು.ಸಮಾರಂಭದ ಮತ್ತೋರ್ವ ಅತಿಥಿ ಶ್ರೀಮತಿ ಹರಿಣಿ ಸಾರಥಿ ಒಡೆಯರ್ ಮಾತನಾಡಿ, ತಮ್ಮ ತಂದೆ ನಿವೃತ್ತ ಡಿಡಿಪಿಐ ದಿವಂಗತ ಶಲ್ವಪಿಳ್ಳೆ ಅಯ್ಯಂಗಾರ್ ಅವರು ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಅವರು ವಿಶೇಷ ಆಸಕ್ತಿ ವಹಿಸಿದ್ದರು ಎಂದು ಸ್ಮರಿಸಿದರು. ದಿವಂಗತ ಶಲ್ವಪಿಳ್ಳೆ ಅಯ್ಯಂಗಾರ್ ಅವರ ಸ್ಮರಣಾರ್ಥ ಅವರ ಮಕ್ಕಳು ಪ್ರತಿವರ್ಷ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡುತ್ತಾ ಬಂದಿದ್ದಾರೆ. ಅದರಂತೆ ಈ ವರ್ಷ ಶಾಂತಿಗ್ರಾಮ ಕೆಪಿಎಸ್‌ನಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು ರೂ.50 ಸಾವಿರ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.ಇದೇ ಸಂದರ್ಭದಲ್ಲಿ ಕೆಪಿಎಸ್ ಶಾಲೆಯ ಅತ್ಯುತ್ತಮ ಫಲಿತಾಂಶಕ್ಕಾಗಿ ಮುಖ್ಯ ಶಿಕ್ಷಕಿ ಶ್ರೀಮತಿ ತನುಜಾ ದೇವ್ ಹಾಗೂ ಸಹ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಳೆಯ ಶಾಲಾ-ಕಾಲೇಜು ವಿದ್ಯಾರ್ಥಿ ಸಂಘದ ಸಂಚಾಲಕ ಜಿ.ಆರ್. ಮಂಜೇಶ್ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರ ಹಲವು ಸೌಲಭ್ಯಗಳನ್ನು ಒದಗಿಸುತ್ತಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉನ್ನತ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು. ನಗದು ಪುರಸ್ಕಾರದ ದಾನಿಗಳ ಕುಟುಂಬದ ದಿವಂಗತ ಶಲ್ವಪಿಳ್ಳೆ ಅಯ್ಯಂಗಾರ್ ಅವರ ಏಕೈಕ ಪುತ್ರ ಪ್ರಸಾದ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.ಸಂಘದ ಉಪಾಧ್ಯಕ್ಷ ಗಂಡಸಿಗೌಡ ಮಾತನಾಡಿದರು. ಸಂಘದ ಕಾರ್ಯದರ್ಶಿ ಎಲ್. ರಂಗಪ್ಪ ಸ್ವಾಗತಿಸಿದರು.