ಎಸ್ಸೆಸ್ಸೆಲ್ಸಿ ಫಲತಾಂಶ ಹೆಚ್ಚಳದ ಕುರಿತು ಪ್ರೌಢಶಾಲಾ ಮುಖ್ಯಶಿಕ್ಷಕರ ಪ್ರಗತಿ ಪರಿಶೀಲನಾ ಸಭೆಕನ್ನಡಪ್ರಭ ವಾರ್ತೆ ಭಟ್ಕಳ
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯರ ಅಧ್ಯಕ್ಷತೆಯಲ್ಲಿ ತಾಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲಾ ಮುಖ್ಯ ಶಿಕ್ಷಕರ ಪ್ರಗತಿ ಪರಿಶೀಲನಾ ಸಭೆಯು ಮುರುಡೇಶ್ವರದ ಜನತಾ ವಿದ್ಯಾಲಯದಲ್ಲಿ ನಡೆಯಿತು.ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಳ ಮತ್ತು ಇತರೆ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು. ಸಚಿವರು ಎಲ್ಲ ಮುಖ್ಯ ಶಿಕ್ಷಕರಿಂದ ಶಾಲೆಯ ಕೊರತೆಗಳ ಬಗ್ಗೆ ಮಾಹಿತಿ ಪಡೆದರು. ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ್ ಈಗಾಗಲೇ ಮುಗಿದಿರುವ ಎರಡು ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ಭಟ್ಕಳದ ಎಸ್ ಎಸ್ ಎಲ್ ಸಿ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿದ್ದ ಎಲ್ಲ ಮುಖ್ಯ ಶಿಕ್ಷಕರಿಂದ ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಳದ ಬಗ್ಗೆ ಮಾಹಿತಿ ಪಡೆಯಲಾಯಿತು. ಉಪನಿರ್ದೇಶಕರ ಕಚೇರಿಯ ಡಿವೈಪಿಸಿ ಭಾಸ್ಕರ ಗಾಂವ್ಕರ್ ಮಾತನಾಡಿ, ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಳದ ಬಗ್ಗೆ ಹಾಗೂ ಅನುದಾನಗಳ ಖರ್ಚು ವೆಚ್ಚಗಳ ಬಗ್ಗೆ ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಸಚಿವ ಮಂಕಾಳ ವೈದ್ಯ ಮಾತನಾಡಿ, ತಾಲೂಕಿನ ಎಲ್ಲಾ 37 ಪ್ರೌಢಶಾಲೆಗಳಲ್ಲೂ ಈ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಶೇಕಡ ನೂರರಷ್ಟು ಆಗಬೇಕು. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವಂತಾಗಬೇಕು. ಮುಂದಿನ ಶೈಕ್ಷಣಿಕ ವರ್ಷದೊಳಗೆ ಯಾವುದೇ ಪ್ರೌಢಶಾಲೆಗಳಲ್ಲಿ ಮೂಲಭೂತ ವ್ಯವಸ್ಥೆಗಳ ಕೊರತೆ ಇರದಂತೆ ಸರಿಪಡಿಸಲಾಗುವುದು ಎಂದು ಹೇಳಿದರು.
ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣಪತಿ ಶಿರೂರ್, ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಸಂತೋಷ್ ಶ್ರೇಷ್ಠಿ ಉಪಸ್ಥಿತರಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ಪೂರ್ಣಿಮಾ ಮೊಗೇರ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಅಶೋಕ ಆಚಾರಿ ವಂದಿಸಿದರು.